ಬೆಂಗಳೂರು: ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಡ್ರಗ್ಸ್ ದಂಧೆಯ ಗಂಭಿರತೆ ಬಗ್ಗೆಯೂ ಸರ್ಕಾರಕ್ಕೆ ಅರಿವಿಲ್ಲ ಎಂದು ಗುಡುಗಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ‘ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ’ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಪರಮೇಶ್ವರ್ ಉಡಾಫೆ ಉತ್ತರ ಕೊಟ್ಟಿದ್ದರು. ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಮಟ್ಟ ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದ್ದಾರೆ.
ಯುವ ಜನಾಂಗದ ಭವಿಷ್ಯಕ್ಕೆ ಮಾರಕವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

