ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ರ್ಯಾಗಿಂಗ್ ಹೆಸರಿನಲ್ಲಿ ನಡೆದ ಹಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಹಲ್ಲೆಯಿಂದ ವಿದ್ಯಾರ್ಥಿಯ ಕುತ್ತಿಗೆಯ ಮೂಳೆ ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲಭ್ಯವಾದ ಮಾಹಿತಿಯ ಪ್ರಕಾರ, ಮಂಗಳವಾರ ಗುಜ್ಜರೆಕೆರೆ ಸಮೀಪ ಈ ಘಟನೆ ನಡೆದಿದೆ. ದ್ವಿತೀಯ ವರ್ಷದ ಲಾಜಿಸ್ಟಿಕ್ಸ್ ವಿಭಾಗದ ವಿದ್ಯಾರ್ಥಿಗಳು ಕಪ್ಪು ಶೂ ಧರಿಸಿಕೊಂಡು ಬಂದ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಚಹಾ ಅಂಗಡಿಯೊಂದರ ಬಳಿ ಇಬ್ಬರು ಜೂನಿಯರ್ ವಿದ್ಯಾರ್ಥಿಗಳು ನಿಂತಿದ್ದ ವೇಳೆ 4 ರಿಂದ 6 ಮಂದಿ ವಿದ್ಯಾರ್ಥಿಗಳ ಗುಂಪು ಏಕಾಏಕಿ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ.
ಹಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಒಬ್ಬನ ಕುತ್ತಿಗೆಗೆ ಗಂಭೀರ ಪೆಟ್ಟಾಗಿ ಮೂಳೆ ಮುರಿದಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಹೆಚ್ಚಿನ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳನ್ನು ರ್ಯಾಗಿಂಗ್ಗೆ ಒಳಪಡಿಸಿ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಈ ಸಂಬಂಧ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಕಾಲೇಜು ಆಡಳಿತವೂ ಆಂತರಿಕ ತನಿಖೆಗೆ ಆದೇಶಿಸಿದೆ.
ಈ ಘಟನೆ ಮಂಗಳೂರಿನ ಶಿಕ್ಷಣ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಕಾಲೇಜುಗಳಲ್ಲಿ ರ್ಯಾಗಿಂಗ್ ತಡೆಗೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಪ್ರಕರಣದ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

