ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿದೆ ಎಂದು ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಸ್ಟ್ 4ರಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಕೈಗೊಂಡಿದ್ದಾರೆ.
ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಶೇಷಾದ್ರಿಪುರಂ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ.
ಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಇದರ ವಿರುದ್ಧ ಹೋರಾಟಕ್ಕೆ ಬೆಂಗಳೂರಿನಿಂದಲೇ ಚಾಲನೆ ನೀಡಲಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಗಸ್ಟ್ 4ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧೀ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯದ ನಾಯಕರು ಭಾಗವಹಿಸಲಿದ್ದಾರೆ. ಈ ಪ್ರತಿಭಟನೆ ಯಶಸ್ವಿಗೊಳಿಸುವ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಸಂಜೆ 4:30ಕ್ಕೆ ಪಕ್ಷದ ಕಚೇರಿಯಲ್ಲಿ ಮುಖಂಡರ ಸಭೆ ಕರೆದಿದ್ದಾರೆ.