ರಾಯಚೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.
ಸಿಂಧನೂರು ಪಟ್ಟಣದಲ್ಲಿ ಇಂದು 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ನವ ಜೋಡಿಗಳನ್ನು ಹರಸಿ ಶುಭಕೋರಿದ ಬಳಿಕ ವೇದಿಕೆ ಮೇಲಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ತೆರಳಿದ ಬೆನ್ನಲ್ಲೇ ವೇದಿಕೆಯ ಮೆಟ್ಟಿಲುಗಳ ಬಳಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಈಶ್ವರ ಖಂಡ್ರೆ ಅವರನ್ನು ಬೇರೆಡೆ ಕರೆದೊಯ್ದರು. ಕೂಡಲೇ ಬೆಂಕಿ ನಂದಿಸಿದ್ದಾರೆ. ತಾಂತ್ರಿಕ ದೋಷದಿಂದಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

