ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಆವರಿಸಿದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ. ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮಳೆ ಕುರಿತು ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.
ಭಾನುವಾರ ರಾಜ್ಯದ ಕೆಲವೆಡೆ ಅಕಾಲಿಕ ಮಳೆಯ ಅಬ್ಬರ ಮುಂದುವರೆದಿದ್ದು, ತುಮಕೂರು, ಬೆಂಗಳೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಯ ಕೆಲವೆಡೆ ಮಳೆಯಾಗಿದ್ದು, ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಭಾನುವಾರ ಸಂಜೆ ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಕುಣಿಗಲ್ ತಾಲೂಕಿನ ಡಿ ಹೊಸಹಳ್ಳಿ ಗ್ರಾಮದಲ್ಲಿ ಗಾಳಿ ಮಳೆಯಿಂದ ಮನೆಯ ಮೇಲೆ ಮರ ಬಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ವಿವಿಧೆಡೆ ಗಾಳಿ ಮಳೆ ಸಹಿತ ಭಾರೀ ಮಳೆಯಾಗಿದ್ದು, ಹಲವು ಬೆಳೆಗಳಿಗೆ ಹಾನಿಯಾಗಿದೆ.

