ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಜಿಟಿಜಿಟಿ ಮಳೆಯಾಗಿದ್ದು, ಕೆಲವು ಕಡೆ ಮೋಡ ಕವಿದ ವಾತಾವರಣ ಕಂಡುಬಂದಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ಕೊಡಗು, ಚಾಮರಾಜನಗರ, ಮೈಸೂರು ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನ ತುಂತುರು ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಜನವರಿ 28ರ ವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ದಿನದ ನಂತರ ಬಿಸಿಲಿನ ವಾತಾವರಣ ಮರುಕಳಿಸುತ್ತದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

