ಬೆಂಗಳೂರು : ಹೊಸ ವರ್ಷಾಚರಣೆ ನಡುವೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ಮೈಸೂರು. ತುಮಕೂರು. ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿಗರಿಗೆ ಸೂಚನೆ
ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸ್ವಲ್ಪ ಪ್ರಮಾಣದಲ್ಲಿ ಚಳಿಯಾಗುವ ಸಾಧ್ಯತೆಯಿದೆ. ಚಳಿಯಿಂದ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹಾಗೂ ಬಿಸಿ ಆಹಾರ ಸೇವಿಸಬೇಕೆಂದು ವೈದ್ಯರು ಸೂಚಿಸಿದ್ದಾರೆ.
ಬೆಂಗಳೂರಿನ ವಾಹನ ಸವಾರರೇ ಗಮನಿಸಿ
ಸಂಭ್ರಮಾಚರಣೆಯ ಪ್ರಮುಖ ಸ್ಥಳವಾಗಿರುವ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಡಿಸೆಂಬರ್ 31ರ ರಾತ್ರಿ 8ರಿಂದ ತಡರಾತ್ರಿ 2 ಗಂಟೆವರೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿ ವೃತ್ತದವರೆಗೆ, ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ, ಚರ್ಚ್ ಸ್ಟ್ರೀಟ್ನ ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ, ರೆಸಿಡೆನ್ಸಿ ರಸ್ತೆಯ ಆಶೀರ್ವಾದಮ್ ಜಂಕ್ಷನ್‌ನಿಂದ ಮೆಯೊ ಹಾಲ್ ಜಂಕ್ಷನ್‌ವರೆಗೆ, ಎಂ.ಜಿ. ರಸ್ತೆ ಜಂಕ್ಷನ್‌ನಿಂದ ಎಸ್‌ಬಿಐ ವೃತ್ತದವರೆಗೆ ಸಂಚಾರ ವ್ಯವಸ್ಥೆ ನಿಷೇಧಿಸಲಾಗಿದೆ.
ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಜಾಗೃತಿ ವಹಿಸಬೇಕು. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಭ್ರಮಾಚರಣೆಯಲ್ಲಿ ಪಟಾಕಿಗಳನ್ನು ಸಿಡಿಸುವಂತಿಲ್ಲ. ಅತಿವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಬಾರದು. ನಿರ್ಬಂಧಿತ ಪ್ರದೇಶಗಳಿಗೆ ಪ್ರವೇಶಿಸಬಾರದು. ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸಬಾರದು. ಅನವಶ್ಯಕವಾಗಿ ಗುಂಪುಗೂಡಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

