ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ನರ್ಸಿಂಗ್, ಅಲೈಡ್ ಹೆಲ್ತ್ ಸೈನ್ಸಸ್, ಫಿಸಿಯೋಥೆರಪಿ ಕಾಲೇಜುಗಳು ಸರ್ಕಾರ ನಿಗದಿಪಡಿಸಿದ ಪ್ರವೇಶ ಶುಲ್ಕಕ್ಕಿಂತ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಂದ ವಸೂಲಿ ಮಾಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಪ್ರವೇಶ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೌನ್ಸೆಲಿಂಗ್ ಮೂಲಕವೇ ನಡೆಸಬೇಕು. ಸರ್ಕಾರ ನಿಗದಿಪಡಿಸಿದ ಶುಲ್ಕವನ್ನಷ್ಟೇ ಪಡೆದುಕೊಳ್ಳಬೇಕು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಅಥವಾ ಇತರೆ ಸಂಬಂಧಿತ ಪ್ರಾಧಿಕಾರಗಳಿಗೆ ಸಲ್ಲಿಸುವ ಎಲ್ಲಾ ಮಾಹಿತಿ ಮತ್ತು ದಾಖಲೆಗಳು ನಿಖರ ಸಂಪೂರ್ಣ ಮತ್ತು ಅಧಿಕೃತವಾಗಿರಬೇಕು ಎಂದು ಹೇಳಲಾಗಿದೆ.
ಪರಿಶೀಲನೆಯ ವೇಳೆ ಯಾವುದೇ ದಾಖಲಾತಿ ಸುಳ್ಳು ಎನ್ನುವುದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ವಿದ್ಯಾರ್ಥಿಗಳ ಪ್ರವೇಶದ ವೇಳೆ ಪಾಲಿಸಬೇಕಾದ ಕೆಲವು ನಿಯಮಗಳನ್ನು ಜಾರಿ ಮಾಡಿದ ರಾಜೀವ್ ಗಾಂಧಿ ಆರೋಗ್ಯ ವಿವಿ ಈ ನಿರ್ದೇಶನಗಳಲ್ಲಿ ಉಲ್ಲಂಘನೆ ಬಂದಲ್ಲಿ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.

