ಬೆಂಗಳೂರು: ಎಫ್ಐಆರ್ ರದ್ದು ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬೆನ್ನಲ್ಲೇ ರಾಜೀವ್ ಗೌಡಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ರಾಜೀವ್ ಗೌಡ ಬಂಧಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ.
ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕರೆ ಮಾಡಿ ನಿಂದಿಸಿದ ಹಾಗೂ ಜೀವಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪೌರಾಯುಕ್ತೆಗೆ ನಿಂದಿಸಿದ ಹಾಗೂ ಬೆದರಿಕೆಯೊಡ್ಡಿರುವ ಆಡಿಯೋ ಕೂಡ ವೈರಲ್ ಆಗಿತ್ತು.
ಪೌರಾಯುಕ್ತೆ ಅಮೃತಾಗೌಡ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜೂವ್ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಂಧನ ಭೀತಿಯಲ್ಲಿರುವ ರಾಜೀವ್ ಗೌಡ ಈ ಹಿಂದೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು. ಇದರ ಬೆನ್ನಲೇ ರಾಜೀವ್ ಗೌಡ ಹೈಕೋರ್ಟ್ ನಲ್ಲಿ ಎಫ್ ಐ ಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜೀವ್ ಗೌಡ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ರಾಜೀವ್ ಗೌಡ ಅರ್ಜಿ ವಜಾಗೊಳಿಸುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ರಾಜೀವ್ ಗೌಡ ಬಂಧನಕ್ಕೆ ಸೂಚಿಸಿದ್ದಾರೆ.
ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಕೋಲಾರ, ತಮಿಳುನಾಡಿನಲ್ಲಿ ರಾಜೀವ್ ಗೌಡಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

