ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಳೆದ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರನ್ನು ಕೇರಳದ ಗಡಿ ಭಾಗದಲ್ಲಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಮಂಗಳವಾರ ಶಿಡ್ಲಘಟ್ಟ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು.
ಪೊಲೀಸರು ಇಂದು ರಾಜೀವ್ ಗೌಡರ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಜೆ.ಎಂ.ಎಫ್.ಸಿ.ಕೋರ್ಟ್, ರಾಜೀವ್ ಗೌಡರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕರೆ ಮಾಡಿದ್ದ ರಾಜೀವ್ ಗೌಡ, ನಿಂದಿಸಿದ್ದಲ್ಲದೇ, ಧಮ್ಕಿ ಹಾಕಿ ಜೀವಬೆದರಿಕೆಯೊಡ್ಡಿದ್ದರು. ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು. ಪೌರಾಯುಕ್ತೆ ಅಮೃತಾಗೌಡ, ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಬಂಧನ ಭೀತಿಯಲ್ಲಿದ್ದ ರಾಜೀವ್ ಗೌಡ, ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಅಲ್ಲದೇ ಹೈಕೋರ್ಟ್ ಕೂಡ ರಾಜೀವ್ ಗೌಡ ಸಲ್ಲಿಸಿದ್ದ ಎಫ್ಐಆರ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರಾಜೀವ್ ಗೌಡ ವಿರುದ್ಧ ಲುಕ್ ಔಟ್ ನೋಟಿಸ್ ಜರಿ ಮಾಡಿದ್ದರು.
ಅಲ್ಲದೇ ರಾಜೀವ್ ಗೌಡ ಬಂಧನಕ್ಕಾಗಿ ಪೊಲೀಸರು ನಾಲ್ಕು ವಿಶೇಷ ತಂಡ ರಚನೆ ಮಾಡಿದ್ದರು. ಪೊಲೀಸರ ಕಣ್ತಪ್ಪಿಸಿ ರಾಜೀವ್ ಗೌಡ ಬೆಂಗಳೂರಿನಿಂದ ಮಂಗಳೂರಿಗೆ ಸಾಗಿ, ಅಲ್ಲಿಂದ ಕೇರಳದತ್ತ ತೆರಳಿರುವ ಬಗ್ಗೆ ಪೊಲೀಸರುಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಮಂಗಳೂರು ಮೂಲದ ಉದ್ಯಮಿ ಮೈಕೆಲ್ ಅವರ ಸಹಾಯದಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರೇ ಕಾರಿನಲ್ಲಿ ಕೇರದತ್ತ ತೆರಳಿದ್ದರು. ಕೇರಳದ ಗಡಿಭಾಗದಲ್ಲಿ ರಾಜೀವ್ ಗೌಡರನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ರಾಜೀವ್ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಉದ್ಯಮಿ ಮೈಕೆಲ್ ಅವರನ್ನೂ ಬಂಧಿಸಲಾಗಿತ್ತು.

