ಬೆಂಗಳೂರು: ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ನನಗೆ ಜಲಸಂಪನ್ಮೂಲ ಖಾತೆ ಬೇಡ ಎಂದು ತಿಳಿಸಿರುವ ರಾಮಲಿಂಗಾರೆಡ್ಡಿ, ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ರಾಮಲಿಂಗಾರೆಡ್ಡಿ ಬೆಂಬಲಿಗರು ಸರ್ಕಾರದ ವಿರುಧ ಸಿಡಿದೆದ್ದಿದ್ದಾರೆ.
ರಾಮಲಿಂಗಾ ರೆಡ್ಡಿ ರಾಜೀನಾಮೆಯಿಂದ ಕೆರಳಿದ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ಅವರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ತೀವ್ರಗೊಳೀಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅವರಿಗೆ ಸೂಕ್ತ ಸ್ಥಾನ ಹಾಗೂ ಖಾತೆ ನೀಡುವಂತೆ ಆಗ್ರಹಿಸಿದ್ದಾರೆ.
ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.

