ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜುಲೈ 30ರಂದು ಅಂತಿಮ ತೀರ್ಪು ಪ್ರಕಟಿಸಲಿದೆ.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತೀರ್ಪು ನೀಡಲಿದ್ದಾರೆ. ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲ್ ನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ತೀರ್ಪಿನ ಕುರಿತು ಆತಂಕ ಶುರುವಾಗಿದೆ. ಒಂದು ವೇಳೆ ಕೋರ್ಟ್ ಅಪರಾಧಿ ಎಂದು ತೀರ್ಪು ನೀಡಿದಲ್ಲಿ ಪ್ರಜ್ವಲ್ ಕನಿಷ್ಠ 10 ವರ್ಷ ಜೀವಾವಧಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 2023ರಲ್ಲಿ ಪ್ರಜ್ವಲ್ ರೇವಣ್ಣ, ಶಾಸಕ ಹೆಚ್.ಡಿ. ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ ಸೇರಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಿಐಡಿ ವಿಶೇಷ ತಂಡ ತನಿಖೆ ನಡೆಸಿ 2 ಸಾವಿರ ಪುಟಗಳ ಆರೋಪ ಪಟ್ಟಿ ಸಲ್ಲಿಸಿದೆ. ಕಳೆದ ಮೇ 2ರಿಂದ ನ್ಯಾಯಾಲಯ ವಿಚಾರಣೆ ನಡೆಸಿದೆ. 26 ಮಂದಿ ಸಾಕ್ಷಿದಾರರ ವಿಚಾರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 180 ದಾಖಲಾತಿಗಳನ್ನು ಸಲ್ಲಿಸಲಾಗಿದೆ. ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯ ಜುಲೈ 30 ರಂದು ಅಂತಿಮ ತೀರ್ಪು ಪ್ರಕಟಿಸಲಿದೆ.