ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಖಾಸಗಿ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಸುಮಾರು ಐದು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ.
ಪ್ರದೇಶದಲ್ಲಿ ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಮಾರ್ಚ್‌ನಲ್ಲೇ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗಿತ್ತು. ಈ ರಜೆಯ ಸಂದರ್ಭದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಈ ವಾರದ ಆರಂಭದಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ವೈದ್ಯರ ಗಮನಕ್ಕೆ ಬಂದಿದೆ. ಕೂಡಲೇ ಶಾಲಾ ಆಡಳಿತ ಮಂಡಳಿ ಆಕೆಯ ಪೋಷಕರಿಗೆ ಮಾಹಿತಿ ನೀಡಿದೆ.
ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ತನಗಾದ ಘಟನೆಯ ಬಗ್ಗೆ ಆಕೆ ಮಾಹಿತಿ ನೀಡಿದ್ದಾಳೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗೂ ಹೇಳಬಾರದು ಎಂದು ಶಿಕ್ಷಕ ಬೆದರಿಕೆ ಹಾಕಿದ್ದನೆಂದೂ ಬಾಲಕಿ ತಿಳಿಸಿದ್ದಾಳೆ ಎಂದು ವರದಿಯಾಗಿದೆ.ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪ ಎದುರಿಸುತ್ತಿರುವ ಖಾಸಗಿ ಶಿಕ್ಷಕನನ್ನು ಬಂಧಿಸಿದ್ದಾರೆ.
ಸದ್ಯ ಬಾಲಕಿಗೆ ವೈದ್ಯಕೀಯ ಪರೀಕ್ಷೆ ಹಾಗೂ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣದ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

