ಬೆಂಗಳೂರು : ಆರ್ಸಿಬಿ (RCB) ವಿಜಯದ ಸಂಭ್ರಮದ ಬೆನ್ನಲ್ಲೇ ಬೆಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 260 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸಂಭ್ರಮಾಚರಣೆ ಜೋರಾಗಿತ್ತು. ಆದರೆ, ಈ ಸಂಭ್ರಮದ ನಡುವೆ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಗರದಲ್ಲಿ ಒಂದೇ ರಾತ್ರಿ ಸುಮಾರು 260 ಮಂದಿ ಸವಾರರ ವಿರುದ್ಧ ‘ಡ್ರಿಂಕ್ ಅಂಡ್ ಡ್ರೈವ್’ (ಮದ್ಯಪಾನ ಮಾಡಿ ವಾಹನ ಚಾಲನೆ) ಪ್ರಕರಣಗಳನ್ನು ದಾಖಲಿಸಲಾಗಿದೆ.
ಪಂದ್ಯದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯವು ಈಗಾಗಲೇ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದು, ಬೈಕ್ ರ್ಯಾಲಿ , ಅತಿವೇಗದ ಚಾಲನೆ ಮತ್ತು ನಿಯಮ ಬಾಹಿರ ಸಂಭ್ರಮಾಚರಣೆಗಳಿಗೆ ನಿಷೇಧ ಹೇರಲಾಗಿತ್ತು. ಆದರೂ, ಎಚ್ಚರಿಕೆಯನ್ನು ಕಡೆಗಣಿಸಿ ರಸ್ತೆಗೆ ಇಳಿದವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

