ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್.ಸಿ.ಬಿ.) ವಿಜಯೋತ್ಸವದ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಪ್ರಕರಣ ಸಂಬಂಧ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪಿಐಎಲ್ ಅನ್ನು ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆಗೆ ಬಂದಿತ್ತು.
ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿ, ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪ್ರಮಾಣೀಕೃತ ಕಾರ್ಯವಿಧಾನ ಬಿಡುಗಡೆ ಮಾಡಿದೆ. ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಲ್ಲಿ ಜನಸಂದಣಿ ನಿಯಂತ್ರಿಸಲು ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ ಸಿದ್ಧಪಡಿಸಿದ್ದು ಜಾರಿಗೆ ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.
ಮುಂದೆ ಅರ್ಜಿ ಸಂಬಂಧ ನ್ಯಾಯಾಲಯ ನೇಮಿಸಿದ ಅಮಿಕಸ್ ಕ್ಯೂರಿಯಾದ ಹಿರಿಯ ವಕೀಲರಾದ ಎಸ್. ಸುಶೀಲಾ ನೀಡಿರುವ ಸಲಹೆ ಶಿಫಾರಸುಗಳನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ವಿಚಾರಣೆ ಆಲಿಸಿದ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ.

