ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಕಾವಾಡಿಗರಾಗಿ ಕೆಲಸ ಪಡೆಯುವ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. 51 ಕಾವಾಡಿಗ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು ಲೋಪಗಳು ನಡೆದಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅರಣ್ಯ ಇಲಾಖೆಯು ಈ ಕುರಿತು ಪ್ರಾಥಮಿಕ ತನಿಖೆ ನಡೆಸಿದ್ದು, ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ನೇಮಕಾತಿ ಬಗ್ಗೆ ಚರ್ಚೆ
ಮೈಸೂರು ವೃತ್ತ ವ್ಯಾಪ್ತಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯು ನೇರ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಈ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಅರಣ್ಯ ಇಲಾಖೆಯ ಅಧಿಕೃತ ಜಾಲತಾಣದಲ್ಲಿಯೂ ಪ್ರಕಟಿಸಲಾಗಿತ್ತು.
ಆದರೆ, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಅಧಿಸೂಚನೆ ಹಾಗೂ ಆಯ್ಕೆಪಟ್ಟಿಯಲ್ಲಿ ಹಲವು ಲೋಪದೋಷಗಳಿವೆ ಎಂದು ಆರೋಪಿಸಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ಲಿಖಿತ ದೂರುಗಳೂ ಸಲ್ಲಿಕೆಯಾಗಿವೆ.
ಆನೆಗಳ ಒಡನಾಟವಿಲ್ಲದವರಿಗೆ ಹುದ್ದೆ ನೀಡಿದ ಆರೋಪ!
ಕಾವಾಡಿಗ ಹುದ್ದೆಗಳ ನೇಮಕಾತಿಯಲ್ಲಿ ಆನೆಗಳೊಂದಿಗೆ ಕೆಲಸ ಮಾಡಿದ ಅನುಭವ ಅಥವಾ ಅವುಗಳ ನಿರ್ವಹಣೆಯ ಬಗ್ಗೆ ಸೂಕ್ತ ಜ್ಞಾನವಿಲ್ಲದವರಿಗೂ ಅವಕಾಶ ಕಲ್ಪಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಣದ ಆಮಿಷಕ್ಕೆ ಒಳಗಾಗಿ ಅರ್ಹ ಅಭ್ಯರ್ಥಿಗಳನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.
ಅರಣ್ಯ ಇಲಾಖೆಯಿಂದ ಪ್ರಾಥಮಿಕ ತನಿಖೆ
ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪ್ರಾಥಮಿಕ ಪರಿಶೀಲನೆ ನಡೆಸಿದೆ. ಈ ಹಿನ್ನೆಲೆಯಲ್ಲಿ 51 ಕಾವಾಡಿಗ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಕಾವಾಡಿಗರು ಆನೆಗಳ ಆರೈಕೆ, ಆಹಾರ, ಆರೋಗ್ಯ ಮತ್ತು ದೈನಂದಿನ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹೀಗಾಗಿ ಇಂತಹ ಜವಾಬ್ದಾರಿಯುತ ಹುದ್ದೆಗಳಿಗೆ ಅರ್ಹತೆ ಹಾಗೂ ಅನುಭವ ಹೊಂದಿರುವವರ ಆಯ್ಕೆಯಾಗಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

