ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯಲ್ಲಿ 1,600 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಗೃಹರಕ್ಷಕ ದಳ, ಪೌರ ರಕ್ಷಣೆ, ಎಸ್ಡಿಆರ್ಎಫ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ 15ನೇ ಹಣಕಾಸು ಯೋಜನೆ ಅಡಿ 329 ಕೋಟಿ ರೂ. ಒದಗಿಸಲಾಗಿದೆ. 21 ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ 98 ಕೋಟಿ ರೂ. ಖರ್ಚು ಮಾಡಲಾಗಿದ್ದು, ಆಧುನಿಕ ಉಪಕರಣಗಳ ಖರೀದಿ, ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 15 ಹೊಸ ತಾಲೂಕುಗಳಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಲು ಸಿಎಂ ಗೆ ಮನವಿ ಮಾಡಲಾಗಿದೆ. ಪೊಲೀಸ್ ವಸತಿಗೃಹಗಳ ರೀತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಹಣ ಒದಗಿಸಲಾಗುವುದು ಎಂದು ಹೇಳಿದ್ದಾರೆ.

