ಬೆಂಗಳೂರು : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಕೆಪಿಎಸ್ ಸಿ ಮೂಲಕ ನೇಮಕಾತಿ ನಡೆಯಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್ ಮಾತನಾಡಿದರು.
ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ಭರ್ತಿಗೆ ಅವರು ನಿರ್ದೇಶನ ನೀಡಿದ್ದಾರೆ. ಕೆಪಿಎಸ್ ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಸಹಾಯಕ ಅಧೀಕ್ಷಕ ಸೇರಿ 1000 ಸಿಬ್ಬಂದಿಗಳ ನೇಮಕಾತಿ ಮಾಡಲಾಗುತ್ತದೆ ಎಂದು ಅವರು ಹೇಳಿದರು. ಹಾಗೂ 5 ವರ್ಷಗಳ ನಂತರ ಜೈಲಾಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಅವರು ಹೇಳಿದರು. ಒಂದೇ ಕಡೆ ಕೆಲಸ ಮಾಡುವುದರಿಂದ ಪ್ರಭಾವ ಬೀರುತ್ತದೆ. ಆದ್ದರಿಂದ 5 ವರ್ಷದ ಬಳಿಕ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗುತ್ತದೆ ಎಂದರು.
ಹಾಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ . ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.
