HomeKarnatakaಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು, ಫಾರ್ಮಸಿಸ್ಟ್‌, ನರ್ಸ್‌, ಲ್ಯಾಬ್‌ ಟೆಕ್ನೀಷಿಯನ್ಸ್, ಡಿ.ಗ್ರೂಪ್ ನೌಕರರ ನೇಮಕಾತಿ:...

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು, ಫಾರ್ಮಸಿಸ್ಟ್‌, ನರ್ಸ್‌, ಲ್ಯಾಬ್‌ ಟೆಕ್ನೀಷಿಯನ್ಸ್, ಡಿ.ಗ್ರೂಪ್ ನೌಕರರ ನೇಮಕಾತಿ: ಯು.ಟಿ.ಖಾದರ್

ಶಿವಮೊಗ್ಗ: ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಸಾಧಾರಣ ಸೇವಾ ಸೌಲಭ್ಯಗಳು ಲಭ್ಯವಿದ್ದಾಗಲೂ ಬಾಣಂತಿ ಅಥವಾ ಮಗುವಿನ ಸಾವು ಯಾವುದೇ ಸರ್ಕಾರಕ್ಕೆ ಸಮಾಧಾನದ ಸಂಗತಿಯಲ್ಲ. ಬಾಣಂತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಮಟ್ಟದ ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಲಾಗಿದೆ. ಅಲ್ಲದೇ ರಾಜ್ಯಮಟ್ಟದ ಅಧಿಕಾರಿಗಳು ಹಾಗೂ ತಜ್ಞರಿಂದಲೂ ಈ ವಿಷಯದ ಕುರಿತು ತನಿಖೆ ನಡೆಸಿ, ವರದಿ ಪಡೆದು ಅಗತ್ಯ ಕ್ರಮ ವಹಿಸಲಾಘುವುದು. ಅಲ್ಲದೆ ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರೊಂದಿಗೂ ಚರ್ಚಿಸಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್‌ ಅವರು ಹೇಳಿದರು.

ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ತಂತ್ರಜ್ಞರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಮೆಗ್ಗಾನ್‌ ಆಸ್ಪತ್ರೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ High Risk Team ಇದ್ದಾಗ್ಯೂ ಚಿಕಿತ್ಸೆಗೆ ಬರುವ ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡದೆ ಬೇರೆಡೆಗೆ ಚಿಕಿತ್ಸೆಗಾಗಿ ಶಿಫಾರಸ್ಸು ಮಾಡುವ ವೈದ್ಯರ ಕ್ರಮ ಸರಿಯಲ್ಲ. ಎಲ್ಲಾ ವ್ಯವಸ್ಥೆಗಳಿರುವ ವೈದ್ಯಕೀಯ ಮಹಾವಿದ್ಯಾಲಯವೇ ಇಲ್ಲಿರುವಾಗ ರೋಗಿಗಳು ಬೇರೆಡೆಗೆ ಹೋಗುವುದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದ ಅವರು, ತೀವ್ರ ಹಾಗೂ ಗಂಭೀರ ಸ್ವರೂಪದ ಕಾಯಿಲೆ ಅಥವಾ ಅಪಘಾತಗಳ ಸಂದರ್ಭದಲ್ಲಿ ವೈದ್ಯರು ಜನಸೇವೆಗೆ ಸದಾ ಸಿದ್ಧರಾಗಿರಬೇಕು ಎಂದರು.

ಹಲವು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರಿಗೆ ಕಂಟಕಪ್ರಾಯವಾಗಿರುವ ಮಂಗನಕಾಯಿಲೆ ನಿಯಂತ್ರಣದ ಕುರಿತು ಶೀಘ್ರದಲ್ಲಿ ಬೆಂಗಳೂರಿನಲ್ಲಿ ತಜ್ಞರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಈವರೆಗೆ ಗುರುತಿಸಲಾಗಿರುವ 130ಪ್ರಕರಣಗಳಲ್ಲಿ 05ಜನರು ಮೃತರಾಗಿರುವುದು ಅತ್ಯಂತ ನೋವಿನ ಸಂಗತಿ. ಸಕಾಲದಲ್ಲಿ ಕಾಯಿಲೆಗೆ ಚಿಕಿತ್ಸೆ ದೊರೆಯುವಂತೆ ವೈದ್ಯಾಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲೆಯಲ್ಲಿ ಡೇಂಗ್ಯೂ, ಚಿಕೂನ್‌ ಗುನ್ಯಾ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯವಾಗಿರುವ ಔಷಧಗಳ ದಾಸ್ತಾನು ಇದೆ. ಈ ಕಾಯಿಲೆಗಳ ನಿಯಂತ್ರಣ ಕ್ರಮವಾಗಿ ವೈದ್ಯಕೀಯ ಸಿಬ್ಬಂಧಿಗಳು ಜನರಲ್ಲಿ ಸ್ವಚ್ಚತೆಯ ಕುರಿತು ಅರಿವು ಮೂಡಿಸುವುದು ಸೊಳ್ಳೆಗಳ ನಿಯಂತ್ರಣ ಕ್ರಮದ ಮೊದಲ ಹೆಜ್ಜೆಯಾಗಿದೆ. ಅಗತ್ಯವಿರುವೆಡೆಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಯಂತ್ರಗಳನ್ನು ಬಳಸಬೇಕು. ಸ್ಥಳೀಯ ಸಂಸ್ಥೆಗಳು ಅಂಗಡಿ ಮುಂಗಟ್ಟುಗಳ ಪರವಾನಿಗೆ ನೀಡುವ ಸಂದರ್ಭದಲ್ಲಿ ಸ್ವಚ್ಚತೆಯ ಕುರಿತು ನಿಬಂಧನೆಗಳನ್ನು ವಿಧಿಸಬೇಕು. ತಪ್ಪಿದಲ್ಲಿ ನಿರ್ದಾಕ್ಷಿಣ್ಯವಾಗಿ ಪರವಾನಿಗೆ ರದ್ದುಗೊಳಿಸಬೇಕು ಎಂದರು.

ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಬಡತನ ರೇಖೆಯ ಕೆಳಗಿನ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಕಡೆಗಳಲ್ಲಿ ಚಿಕಿತ್ಸೆಗೆ ದಾಖಲಾದ ವ್ಯಕ್ತಿಯಿಂದ ಚಿಕಿತ್ಸೆ ನೀಡಿದ ಬಗ್ಗೆ ಹಣ ವಸೂಲಾತಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಅಂತಹ ಘಟನೆಗಳು ಮರುಕಳಿಸಿ ದೂರುಗಳು ದಾಖಲಾದಲ್ಲಿ ಅಂತಹ ಅಧಿಕಾರಿ-ಸಿಬ್ಬಂಧಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಆಯುಷ್ಮಾನ್‌ ಯೋಜನೆಯ ನೋಂದಣಿ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳ ನೆಪವೊಡ್ಡಿ, ಸಾರ್ವಜನಿಕರಿಗೆ ಅನಗತ್ಯ ಕಿರಿಕಿರಿ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಇಂತಹ ವಿಷಯಗಳಲ್ಲಿ ದೂರುಗಳು ದಾಖಲಾದಲ್ಲಿ ʼಆರೋಗ್ಯಮಿತ್ರʼ ಸಿಬ್ಬಂಧಿ ಮತ್ತು ಸಂಬಂಧಿಸಿದ ಕಾರ್ಯಕ್ರಮ ಸಂಯೋಜಕರ ವಿರುದ್ದ ಕ್ರಮ ಅನಿವಾರ್ಯವಾಗಲಿದೆ ಎಂದ ಅವರು ಆರೋಗ್ಯ ಇಲಾಖೆಯ ಎಲ್ಲಾ ಹಂತದ ಅಧಿಕಾರಿ ಸಿಬ್ಬಂಧಿಗಳು ತಮ್ಮ ಜವಾಭ್ದಾರಿಯರಿತು ಪ್ರಾಮಾಣಿಕವಾಗಿ ಸಾರ್ವಜನಿಕ ಸೇವೆ ಸಲ್ಲಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಹ ವೈದ್ಯರನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆ ಆಧಾರದ ಮೇಲೆ ಸೇವೆಗೆ ಮುಂದಾಗಿ ಅರ್ಜಿ ಸಲ್ಲಿಸುವ ಅರ್ಹ ವೈದ್ಯರ ಅರ್ಜಿಗಳನ್ನು ಕೂಡಲೇ ಪರಿಶೀಲಿಸಿ, ಮೂರು ದಿನಗಳೊಳಗಾಗಿ ನೇಮಕಾತಿ ಆದೇಶ ನೀಡಲಾಗುವುದು. ಮಲೆನಾಡು, ಗುಡ್ಡಗಾಡು, ಗಡಿ, ಕಾಡಿನ ಮದ್ಯದ ಪ್ರದೇಶಗಳು ಸೇರಿದಂತೆ ನಗರದಿಂದ ದೂರದ ಪ್ರದೇಶದಲ್ಲಿದ್ದು, ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂಧಿಗಳಿಗೆ ವಿಶೇಷ ವೇತನ ಭತ್ಯೆಗಳನ್ನು ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಡಾಕ್ಟರ್‌, ಎ.ಎನ್.ಎಂ., ಫಾರ್ಮಸಿಸ್ಟ್‌, ನರ್ಸ್‌, ಲ್ಯಾಬ್‌ ಟೆಕ್ನೀಷಿಯನ್ಸ್, ಡಿ.ಗ್ರೂಫ್‌ ನೌಕರರ ನೇಮಕಾತಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು. ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದ ಅವರು, ಶಿವಮೊಗ್ಗದಲ್ಲಿ ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಎಲ್ಲಿ ನಿರ್ಮಿಸಬೇಕು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಪ್ರಸ್ತುತ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ವಿಷಯ ಸರ್ಕಾರದ ಮುಂದಿಲ್ಲ ಎಂದವರು ನುಡಿದರು.

ಮಂಗನ ಕಾಯಿಲೆ ನಿಯಂತ್ರಣಕ್ಕೆ ಈ ಹಿಂದೆ ಬಳಸುತ್ತಿದ್ದ ತೈಲವನ್ನು ಹಲವು ಕಾರಣಗಳಿಂದಾಗಿ ಹಿಂಪಡೆಯಲಾಗಿದೆ. ಅಲ್ಲದೇ ಕಾಯಿಲೆಯ ನಿಯಂತ್ರಣಕ್ಕೆ ಔಷಧ ಸಂಶೋಧಿಸಲು ಈಗ್ಗೆ ಐದು ವರ್ಷಗಳ ಹಿಂದೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಅಲ್ಲದೇ ಇತ್ತೀಚೆಗೆ ಕೇಂದ್ರ ವೈದ್ಯಕೀಯ ಸಚಿವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಮಾತ್ರೆಗಳ ಕೊರತೆ ಇದ್ದ ಬಗ್ಗೆ ಅಧೀಕೃತವಾಗಿ ಮಾಹಿತಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ, ಶಾಸಕ ಚನ್ನಬಸಪ್ಪ ಎಸ್.ಎನ್., ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಅಲೆಮಾರಿ ಅಭಿವೃದ್ಧಿ ನಿಗಮದ ಅ‍ಧ್ಯಕ್ಷೆ ಪಲ್ಲವಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular