ಬೆಂಗಳೂರು: ಬಿಡಿಎ, ತಾಂತ್ರಿಕ ಶಿಕ್ಷಣ ಇಲಾಖೆ, ಆರ್‌ಜಿಯುಹೆಚ್‌ಎಸ್, ಬಿಡಬ್ಲುಎಸ್‌ಎಸ್‌ಬಿ, ಕೆಕೆಆರ್‌ಟಿಸಿ, ಕೆಎಸ್‌ಡಿಎಲ್, ಕೆಎಸ್‌ಎಸ್‌ಐಡಿಸಿ ಮುಂತಾದ ಇಲಾಖೆ, ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳಿಗೆ ಜನವರಿ 11 ರಂದು ನೇರ ನೇಮಕಾತಿ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ವಿವಿಧ ಷರತ್ತಿಗೊಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ.
ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ.
ಪ್ರತಿ 24 ವಿದ್ಯಾರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿ, ಅವರಿಗೆ ಅಗತ್ಯ ತರಬೇತಿಯನ್ನು ನೀಡಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವುದು, ಪರೀಕ್ಷಾ ಕೇಂದ್ರಗಳಿಗೆ ಜಾಮರ್ ಅಳವಡಿಸುವುದು.
ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಮುಂಜಾಗ್ರತೆ ಕ್ರಮವಾಗಿ 200 ಮೀಟರ್ ಪ್ರದೇಶವನ್ನು ನಿಷೇದಿತ ಸ್ಥಳವೆಂದು ಘೋಷಿಸಲಾಗಿದ್ದು ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಸುವುದು, ಅಭ್ಯರ್ಥಿಗಳ ತಪಾಸಣೆ ಮಾಡಲು ಅಗತ್ಯವಿರುವಷ್ಟು ಹೋಮ್ ಗಾರ್ಡ್ಗಳನ್ನು ನೇಮಿಸಿಕೊಳ್ಳಬೇಕು ಹಾಗೂ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ವ್ಯವಸ್ಥಿತ ರೀತಿಯಲ್ಲಿ ನಡೆಸಲು ಎಲ್ಲಾ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕಡ್ಡಾಯವಾಗಿ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಪಾಲಿಸಬೇಕು. ಅದರ ವಿವರಗಳನ್ನು ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ಹಾಗೂ ಇಲಾಖೆಯ ಅಂತರ್ಜಾಲ http://kea.kar.nic.in ದಲ್ಲಿ ಅಳವಡಿಸಿದೆ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ ಗಳು , ಪೆನ್ ಡ್ರೆöÊವ್ ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್ ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳು, ತಿನ್ನಬಹುದಾದ ಪದಾರ್ಥಗಳು, ತಲೆಯ ಮೇಲೆ ಟೋಪಿ, ಮಾಸ್ಕ್ ಅಂತಹ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಂಡು ಹೋಗದಂತೆ ನಿಷೇದಿಸಲಾಗಿದೆ. ಅಭ್ಯರ್ಥಿಗಳು ಪೆನ್, ಪ್ರವೇಶ ಪತ್ರ ಹಾಗೂ ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಮಾತ್ರ ಪರೀಕ್ಷಾ ಕೇಂದ್ರಗಳಲ್ಲಿ ಅನುಮತಿಸಲಿದೆ.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಂದು ಪ್ರಶ್ನೆಗೆ 5 ಆಯ್ಕೆಗಳಿದ್ದು, ಕಡ್ಡಾಯವಾಗಿ ಪ್ರತಿ ಪ್ರಶ್ನೆಗೆ ಉತ್ತರವನ್ನು ಆಯ್ಕೆ ಮಾಡಬೇಕಾಗಿರುತ್ತದೆ. ಒಂದು ವೇಳೆ ಉತ್ತರ ತಿಳಿದಿಲ್ಲವೆಂದರೆ ಪರೀಕ್ಷಾ ಅವಧಿ ನಂತರ ಹೆಚ್ಚುವರಿಯಾಗಿ 5 ನಿಮಿಷಗಳನ್ನು ನೀಡಿದ್ದು ಈ ಅವಧಿಯಲ್ಲಿ ಕೊನೆಯ ಆಯ್ಕೆ ಇ(ಇ) ಅನ್ನು ಕಡ್ಡಾಯವಾಗಿ ಮಾಡಬೇಕು, ಆಯ್ಕೆ ಮಾಡಿಲ್ಲವೆಂದರೆ ವಿದ್ಯಾರ್ಥಿ ಪಡೆದ ಒಟ್ಟು ಅಂಕಗಳಲ್ಲಿ ಒಂದನೇ ನಾಲ್ಕು ಭಾಗ ಕಡಿತಗೊಳಿಸಲಾಗುತ್ತದೆ.

