ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಮ್ಯಾನ್ ನನ್ನು ಬಿಡದಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ರಿಕ್ಕಿ ರೈ ಗನ್ ಮ್ಯಾನ್ ವಿಠಲ್ ರಾವ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ನಿನ್ನೆ ಬಿಡದಿ ಪೊಲೀಸರು ವಿಚಾರಣೆ ನಡೆಸುತ್ತಿದ್ದ ವೇಳೆ ವಿಠಲ್ ರಾವ್ ಗೆ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿಠಲ್ ರಾವ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಕೆಲದಿನಗಳ ಹಿಂದೆ ಗುಂಡಿನ ದಾಳಿ ನಡೆದಿತ್ತು. ಬಿಡದಿಯ ಮನೆಯಿಂದ ಕಾರಿನಲ್ಲಿ ಬರುತ್ತಿದ್ದ ವೇಳೆ ಅವರ ಮೇಲೆ ಫೈರಿಂಗ್ ನಡೆಸಲಾಗಿತ್ತು. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ನಡುವೆ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಸಾಕಷ್ಟು ಅನುಮಾನಕ್ಕೂ ಕಾರಣವಾಗಿದ್ದು, ಸೆಲ್ಫ್ ಫೈರಿಂಗ್ ಬಗ್ಗೆಯೂ ಸಂಶಯ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿಯೂ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.