HomeKarnatakaಅಪಾಯಕಾರಿ ಸ್ಥಿತಿಗೆ ಬಿಸಿಲ ತಾಪ: ಕಡ್ಡಾಯವಾಗಿ ಎಚ್ಚರಿಕೆ ಕ್ರಮ ಅನುಸರಿಸಲು ಸಲಹೆ

ಅಪಾಯಕಾರಿ ಸ್ಥಿತಿಗೆ ಬಿಸಿಲ ತಾಪ: ಕಡ್ಡಾಯವಾಗಿ ಎಚ್ಚರಿಕೆ ಕ್ರಮ ಅನುಸರಿಸಲು ಸಲಹೆ

ಶಿವಮೊಗ್ಗ: ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಪರಿಣಾಮ ನಾವು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಕೆಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು ಇಲ್ಲವಾದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳೊಂದಿಗೆ ಮರಣ ಸಂಭವಿಸುವ ಸಾಧ್ಯತೆ ಇದೆ ಎಂದು ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜನಾಯ್ಕ ಎಚ್ಚರಿಕೆ ನೀಡಿದ್ದಾರೆ.

ಇಂದು ತುಂಗಾನಗರದ ನಗರ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಬಿಸಿಲಿನ ತಾಪಮಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಸಿಲಿನ ತಾಪಮಾನದಿಂದ ವಯಸ್ಕರು, ಮಕ್ಕಳು ಹಾಗೂ ವಯೋವೃದ್ದರು ಅಪಾಯದ ಸ್ಥಿತಿಯಲ್ಲಿದ್ದು, ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡು ಕೆಲವು ಮಾರ್ಗೋಪಾಯಗಳನ್ನು ಅನುಸರಿಸಬೇಕು. ಕಡ್ಡಾಯವಾಗಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಮಕ್ಕಳಲ್ಲಿ ಅತಿಸಾರ ಬೇಧಿ, ವೃದ್ದರಲ್ಲಿ ಸನ್‍ಸ್ಟ್ರೋಕ್, ಮಧ್ಯವಯಸ್ಕರಲ್ಲಿ ವಿಪರೀತ ತಲೆನೋವು ಹೆಚ್ಚಾಗುವ ಸಂಭವ ಇರುತ್ತದೆ. ಈ ಸಮಯದಲ್ಲಿ ಸಾಧ್ಯವಾದಷ್ಟು ಬೆಳಿಗ್ಗೆ ಹಾಗೂ ಸಾಯಂಕಾಲ ಕೆಲಸ ಮಾಡುವ ಪದ್ದತಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ನೀರನ್ನು ಹೆಚ್ಚಾಗಿ ಕುಡಿಯಬೇಕು. ದ್ರವರೂಪದ ಆಹಾರ ಪದ್ದತಿ ಅಳವಡಿಸಿಕೊಳ್ಳಬೇಕು. ಕರಿದ ಎಣ್ಣೆಯ ಪದಾರ್ಥಗಳನ್ನು ಉಪಯೋಗಿಸದೇ ಇರುವುದು ಆರೋಗ್ಯಕ್ಕೆ ಉತ್ತಮ. ಓಆರ್‍ಎಸ್ ಹೆಚ್ಚಾಗಿ ಉಪಯೋಗಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಮರಣ ಸಂಭವದ ಸಾಧ್ಯತೆಗಳಿದ್ದು ಎಚ್ಚರಿಕೆಯನ್ನು ವಹಿಸಬೇಕೆಂದು ಅವರು ತಿಳಿಸಿದರು.

ಕೀಟಜನ್ಯ ರೋಗಗಳ ಜಿಲ್ಲಾ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಮಾತನಾಡಿ, ಜಾಗತಿಕ ತಾಪಮಾನದಲ್ಲಿ ವಿಪರೀತ ಬದಲಾವಣೆ ಆಗಿದ್ದು, ಅನೇಕ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನಿಡಿ ಚಿಕಿತ್ಸೆ ಪಡೆಯಬೇಕೆಂದು ತಿಳಿಸಿದರು.

ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭೀಮಪ್ಪ ಎಂ.ಎಸ್. ಮಾತನಾಡಿ, ಇತ್ತೀಚೆಗೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರ, ಕೆಮ್ಮು, ನೆಗಡಿ ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಪರೀಕ್ಷೆ ಮಾಡಿಸಿ, ಬೇಗ ಚಿಕಿತ್ಸೆ ಪಡೆಯುವುದರಿಂದ ಮುಂದಾಗುವ ಅನಾಹುತಗಳನ್ನು ತಡೆಯಬಹುದು ಎಂದು ತಿಳಿಸಿದರು.

ಈ ವೇಳೆ ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎ.ಅಕ್ತಾರ್, ಎಂಎಸ್‍ಡಬ್ಲ್ಯೂ ವಿದ್ಯಾರ್ಥಿಗಳು ಹಾಜರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular