ಬೆಂಗಳೂರು: ಬೇಸಿಗೆ ಬಿಸಿಲ ತಾಪಮಾನ ಹೆಚ್ಚಾಗಿರುವುದರಿಂದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ, ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಹೆಚ್ಚಾಗಿದೆ. ನೌಕರರು ಕಾರ್ಯನಿರ್ವಹಿಸುವಲ್ಲಿ ತೊಂದರೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಮಾನವೀಯ ದೃಷ್ಟಿಯಿಂದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1:30ರ ವರೆಗೆ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ತುರ್ತು ಸಂದರ್ಭಗಳಲ್ಲಿ ಸಮಯದ ಮಿತಿ ಇಲ್ಲದೆ ಕೆಲಸ ಮಾಡಬೇಕು. ಸಾಮಾನ್ಯ ಸಂದರ್ಭಗಳಲ್ಲಿ ಮಾತ್ರ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಸಮಯ ಬದಲಾವಣೆ ವೇಳಾಪಟ್ಟಿ ಕೇವಲ ಏಪ್ರಿಲ್ ಮತ್ತು ಮೇ ತಿಂಗಳಿಗೆ ಮಾತ್ರ ಅನ್ವಯವಾಗಲಿದೆ. ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಪ ಮತ್ತು ಅಡೆತಡೆ ಇಲ್ಲದೆ ನೌಕರರು ಕಾರ್ಯನಿರ್ವಹಿಸಬೇಕು.
ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು ತುರ್ತು ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿ ಇಲ್ಲದೆ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಲಾಗಿದೆ.

