ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನದಿ ಪಾತ್ರಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದು, ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಬಗ್ಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿದೆ.
ಜನವರಿ 28ರಂದು ಪ್ರಕಟವಾದ ಮಾಧ್ಯಮ ವರದಿಗಳನ್ನು ಪರಿಗಣಿಸಿ ಜನವರಿ 31ರಂದು ಹೈಕೋರ್ಟ್ ವಿಭಾಗೀಯ ಪೀಠವು ಸ್ವಯಂಪ್ರೇರಿತ ಪಿಐಎಲ್ ದಾಖಲಿಸಲು ಆದೇಶಿಸಿತ್ತು. ಇದೊಂದು ಗಂಭೀರ ವಿಷಯವಾಗಿದೆ. ಕೇಂದ್ರ ಸಂಸ್ಥೆ, ವಿಶೇಷವಾಗಿ ರಚಿಸಲಾದ ತನಿಖಾ ಸಂಸ್ಥೆ ಅಥವಾ ವಿಶೇಷ ತನಿಖಾ ತಂಡದಿಂದ ಮೂಲಕ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ಇದರ ತನಿಖೆಯ ಅಗತ್ಯವಿದೆ ಎಂದು ಪೀಠ ಅಭಿಪ್ರಾಯಪಟ್ಟಿತ್ತು.
ವಿಧಾನಸಭೆಯಲ್ಲಿ ಮಾತನಾಡಿದ್ದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅಕ್ರಮ ಮರಳು ಗಣಿಗಾರಿಕೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. ಇದನ್ನು ಉಲ್ಲೇಖಿಸಿದ ವಿಭಾಗೀಯ ಪೀಠ, ರಾಜ್ಯದ ಗೃಹ ಸಚಿವರೇ ಮರಳು ಮಾಫಿಯಾಗಳ ವಿರುದ್ಧ ಕ್ರಮ ಕೈಗೊಳ್ಳಲು ಅಸಹಾಯಕತೆಯನ್ನು ವ್ಯಕ್ತಪಡಿಸಿದರೆ, ರಾಜ್ಯದ ಆಡಳಿತದಿಂದ ಈ ಅಕ್ರಮ ಚಟುವಟಿಕೆಯನ್ನು ನಿಯಂತ್ರಿಸುವ ನಿರೀಕ್ಷೆ ಇಡಲು ಸಾಧ್ಯವಿಲ್ಲ ಎಂದು ಜನವರಿ 31ರ ಆದೇಶದಲ್ಲಿ ತಿಳಿಸಿತ್ತು.
ಅಲ್ಲದೇ ಕೃಷ್ಣಾ ನದಿ ತಟ ಪ್ರದೇಶದಲ್ಲಿ ರಾತ್ರಿ ವೇಳೆ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಮರಳು ಗಣಿಗಾರಿಕೆಯ ಧೂಳು ಬೆಳೆಗಳ ಮೇಲೆ ಕುಳಿತು ರೈತರಿಗೆ ಹಾನಿ ಉಂಟಾಗುತ್ತಿದೆ ಎಂಬ ದೂರುಗಳು ಸೇರಿದಂತೆ ಹಲವು ವಿಷಯಗಳನ್ನು ಪೀಠ ಉಲ್ಲೇಖಿಸಿದೆ.
ರಾಯಚೂರು ಜಿಲ್ಲೆಯ ಮಹಿಳಾ ಶಾಸಕಿ ಕರೇಮ್ಮ ಜಿ. ನಾಯಕ್ ಅವರು ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಧ್ವನಿ ಎತ್ತಿದ ಬಳಿಕ ಮರಳು ಮಾಫಿಯಾದಿಂದ ಜೀವ ಬೆದರಿಕೆ ಬಂದಿರುವುದಾಗಿ ಹೇಳಿದ್ದರು. ಈ ವಿಚಾರವನ್ನೂ ಹೈಕೋರ್ಟ್ ತನ್ನ ಆದೇಶದಲ್ಲಿ ಪ್ರಸ್ತಾಪಿಸಿದೆ.

