ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ದೇವದುರ್ಗ ತಾಲೂಕಿನ ಕೃಷ್ಣಾ ನದಿ ತೀರದಲ್ಲಿ ಮರಳು ದಂಧೆಕೋರರು ನದಿಯ ಒಡಲು ಬಗೆಯುತ್ತಿದ್ದಾರೆ. ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿರುವ ದೇವದುರ್ಗ ಜೆಡಿಎಸ್ ಶಾಸಕ ಕರೆಮ್ಮ ನಾಯಕ್ ಅವರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಅಕ್ರಮ ಮರಳು ದಂಧೆ ತಡೆಯಲು ಮುಂದಾಗಿರುವ ಶಾಸಕಿ ಕರೆಮ್ಮ ನಾಯಕ್ ಅವರ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ಗುಂಪು ಧಮ್ಕಿ ಹಾಕಿ ಬೆದರಿಕೆಯೊಡ್ಡಿದ್ದಾರೆ ಎಂದು ಶಾಸಕಿ ಆರೋಪಿಸಿದ್ದಾರೆ. ಮರಳು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಶಾಸಕಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಮರಳು ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ದಾಲಿ ವೇಳೆ ಜೆಸಿಬಿ, ಟಿಪ್ಪರ್ ವಾಹನ, ಟ್ರ್ಯಾಕ್ಟರ್ ಸೇರಿದಂತೆ 7 ವಾಹನಗಳನ್ನು ಜಪ್ತಿ ಮಾಡಿದ್ದರು.
ಪೊಲೀಸರ ದಾಳಿಯಿಂದ ಆಕ್ರೋಶಗೊಂಡಿರುವ ಮರಳು ದಂಧೆಕೋರರು ಶಾಸಕಿ ಕರೆಮ್ಮ ನಾಯಕ್ ಅವರುಗೆ ಬೆದರಿಕೆ ಹಾಕಿದ್ದಾರಂತೆ. ಈ ಬಗ್ಗೆ ಸ್ವತಃ ಶಾಸಕಿ ಮಾಹಿತಿ ನೀಡಿದ್ದು, ದುಷ್ಕರ್ಮಿಗಳು ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ದೇವದುರ್ಗ ಠಾಣೆಯಲ್ಲಿ ದೂರು ನೀಡಿದ್ದಾಗಿ ತಿಳಿಸಿದ್ದಾರೆ. ಅಲ್ಲದೇ ಅಕ್ರಮ ಮರಳು ದಂಧೆ ಹಾಗೂ ಶಾಸಕಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ೬೦ ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆದರಿಕೆ ಹಾಕಿದವರು ಹಾಗೂ ಅಕ್ರಮ ಮರಳು ದಂಧೆಕೋರರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

