ಬೆಂಗಳೂರು: ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಅಂತವರಿಗೆ ರಜೆ ನೀಡಬೇಕು ಎಂದು ಹೇಳಿದ್ದಾರೆ.
ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. ಆದರೆ, ಮುಂಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಿದರೆ ಅದನ್ನು ಶಾಲೆಗಳಲ್ಲಿ ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿ ಜಾರಿ ಮಾಡುತ್ತೇವೆ. ಇದುವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ನೀಡಿಲ್ಲ. ಸೋಮವಾರ ಮುಖ್ಯಮಂತ್ರಿಗಳು ಅಧಿಕಾರಿಗಳ ಜತೆ ಸಭೆ ನಡೆಸಿ ಕೆಲವು ಮಾರ್ಗಸೂಚಿಗಳನ್ನು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನ ಪಾಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.