HomeLatest Newsಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್

ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್

ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್(85) ತೀವ್ರ ಹೃದಯಾಘಾತದಿಂದ ಬುಧವಾರ ಸಂಜೆ ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಕಮ್ಯುನಿಸ್ಟ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಪ್ರಧಾನ ಕಾರ್ಯದರ್ಶಿಯಾಗಿ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಡಿಸೆಂಬರ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೂ ಅವರ ಹೋರಾಟ ಮುಂದುವರೆದಿತ್ತು. ಕೆಎಸ್ಆರ್ಟಿಸಿ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ವತಿಯಿಂದ ಜನವರಿ 29ರಂದು ಸಾರಿಗೆ ನೌಕರರ ಪ್ರತಿಭಟನೆಗೆ ಕರೆ ನೀಡಿದ್ದರು.

ಬುಧವಾರ ಬೆಳಗ್ಗೆಯಿಂದ ಸಂಘಟನೆಯ ನಾಯಕರೊಂದಿಗೆ ಪ್ರತಿಭಟನೆಯ ಬಗ್ಗೆ ದೂರವಾಣಿ ಮೂಲಕ ಅನಂತ ಸುಬ್ಬರಾವ್ ಚರ್ಚೆ ನಡೆಸಿದ್ದರು. ಸಂಜೆ ಐದು ಗಂಟೆಗೆ ಶೇಷಾದ್ರಿಪುರಂನಲ್ಲಿರುವ ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಕಚೇರಿಗೆ ಹೋಗಲು ಸಿದ್ದವಾಗುತ್ತಿದ್ದ ಸಂದರ್ಭದಲ್ಲೇ ಅವರಿಗೆ ಎದೆ ನೋವು ಕಾಣಿಸಿಕೊಂಡು ಉಸಿರಾಟ ತೊಂದರೆಯಾಗಿದೆ. ವಿಜಯನಗರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಚಲೋ ಮುಂದೂಡಿಕೆ

ಅನಂತ ಸುಬ್ಬರಾವ್ ನಿಧನದ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ವೇತನ ಹೆಚ್ಚಳ ಮತ್ತು ವೇತನ ಹೆಚ್ಚಳ ಹಿಂಬಾಕಿ ಪಾವತಿಗೆ ಆಗ್ರಹಿಸಿ ಗುರುವಾರ ಕೈಗೊಂಡಿದ್ದ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಲಾಗಿದೆ.

ಸಿಎಂ ಸಂತಾಪ

ಅನಂತ ಸುಬ್ಬರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡರಾದ ಎಚ್‌.ವಿ. ಅನಂತ ಸುಬ್ಬರಾವ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ‌ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ. ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಅಂತಿಮ ದರ್ಶನ

ಅನಂತ ಸುಬ್ಬರಾವ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವೈಯಾಲಿಕಾವಲ್ ನಲ್ಲಿರುವ ಸಿಪಿಐ ರಾಜ್ಯ ಕಚೇರಿ ಘಾಟೆ ಭವನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ, ಸಾರಿಗೆ ಸಚಿವರು ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ.

ಇನ್ನು ಅನಂತ ಸುಬ್ಬರಾವ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಮೃತದೇಹವನ್ನು ಸರ್ಕಾರಿ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಲು ಕುಟುಂಬದವರು ನಿರ್ಧರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular