ಬೆಂಗಳೂರು: ಸಿಲಿಕಾನ್ ಸಿಟಿಯ ಅನೇಕಲ್ನಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶಾಲಾ ಮಕ್ಕಳಿಗೆ ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ, ಒಂಬತ್ತು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಾಮಪಿಶಾಚಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ವಿವರ
ಅನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಈ ಕೃತ್ಯ ನಡೆದಿದೆ. ಆರೋಪಿ ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ ಎಂಬಾತ ಶಾಲಾ ಆವರಣದಲ್ಲಿ ಮಕ್ಕಳಿಗೆ ಚಾಕೊಲೇಟ್ ಆಸೆ ತೋರಿಸುತ್ತಿದ್ದ. ಮುಗ್ಧ ಮಕ್ಕಳನ್ನು ಪುಸಲಾಯಿಸಿ ಶಾಲಾ ಆವರಣ ಮತ್ತು ಶೌಚಾಲಯಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ.
ಬಂಧನ ಮತ್ತು ಕಾನೂನು ಕ್ರಮ:
ಒಟ್ಟು 9 ವಿದ್ಯಾರ್ಥಿನಿಯರ ಮೇಲೆ ಈತ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಅನೇಕಲ್ ಪೊಲೀಸರು ನಿನ್ನೆ ಆರೋಪಿ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಶಾಲಾ ಆವರಣದಲ್ಲೇ ಇಂತಹ ಕೃತ್ಯ ನಡೆದಿರುವುದು ಪೋಷಕರಲ್ಲಿ ಭೀತಿ ಹುಟ್ಟಿಸಿದೆ.

