ಕೊಪ್ಪಳ: 17 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್(ತ್ವರಿತ ವಿಲೇವಾರಿ ಪೋಕ್ಸೊ) ನ್ಯಾಯಾಲಯ ತೀರ್ಪು ನೀಡಿದೆ.
ಬಸಾಪುರ ಗ್ರಾಮದ ಭೀಮೇಶ್ ಶಿಕ್ಷೆಗೆ ಒಳಗಾದ ವ್ಯಕ್ತಿಯಾಗಿದ್ದಾನೆ. ಕಾಲೇಜಿಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ಭೀಮೇಶ ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿದ್ದು, ಮದುವೆಯಾಗುವುದಾಗಿ ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಬಾಲಕಿಯ ಪೋಷಕರು ಈ ಕುರಿತಾಗಿ ಮುನಿರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 2022ರಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ವಿಶ್ವನಾಥ ಹಿರೇಗೌಡರ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಡಿ.ಕೆ. ಕುಮಾರ್ ಅವರು ಮೇ 5ರಂದು ತೀರ್ಪು ನೀಡಿದ್ದಾರೆ. ಸರ್ಕಾರಿ ವಿಶೇಷ ಅಭಿಯೋಜಕರಾದ ಗೌರಮ್ಮ ಎಲ್. ದೇಸಾಯಿ ಅವರು ವಾದ ಮಂಡಿಸಿದ್ದರು.