ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಅವರು ತಮ್ಮ ಜೀವನವನ್ನು ಸಾರ್ವಜನಿಕ ಸೇವೆಗೆ ಆಚಲ ಬದ್ಧತೆಯಿಂದ ಮುಡಿಪಾಗಿಟ್ಟಿದ್ದರು. ಕರ್ನಾಟಕ ಮತ್ತು ಕಾಂಗ್ರೆಸ್ ಗೆ ಅವರ ಕೊಡುಗೆ ಅಪಾರವಾಗಿದೆ. ಅವರ ಕುಟುಂಬ ಸ್ನೇಹಿತರು ಮತ್ತು ಬೆಂಬಲಿಗರಿಗೆ ಸಂತಾಪಗಳು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸೂಚಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸಂತಾಪ ಸೂಚಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಇಂದು ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ ನೆರವೇರಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ.

