ಶಿವಮೊಗ್ಗ: ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ ಶಿವಮೊಗ್ಗ. ಶಿವಮೊಗ್ಗ ನಗರಕ್ಕೆ ಉತ್ತಮ ಭವಿಷ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಅಭಿವೃದ್ದಿ ಒಂದು ನಿರಂತರ ಪ್ರಕ್ರಿಯೆ. 2006 ರ ಹಿಂದಿನ ಶಿವಮೊಗ್ಗ ಹಾಗೂ ಇಂದಿನ ಶಿವಮೊಗ್ಗದಲ್ಲಿ ಅಜಗಜಾಂತರ ವ್ಯತ್ಯಾಸವಿದ್ದು, ಜಿಲ್ಲೆಯಲ್ಲಿ ಸರ್ವತೋಮುಖ ಅಭಿವೃದ್ದಿಯನ್ನು ನಾವು ಕಾಣುತ್ತಿದ್ದೇವೆ. ಇಂದು ಸುಮಾರು 1000 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ವಸತಿ ಯೋಜನೆಗಳಡಿ ಮನೆಗಳನ್ನು ನೀಡುವುದು, ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ, ಶಿಕ್ಷಣ, ರಸ್ತೆ, ನೀರು, ನಗರಾಭಿವೃದ್ದಿ, ತಂತ್ರಜ್ಞಾನ ಹೀಗೆ ಹತ್ತು ಹಲವು ಪುಣ್ಯದ ಕೆಲಸಗಳು ಜನೋಪಯೋಗಿ ನಾಯಕರಿಂದ ಇಂದು ಸಾಧ್ಯವಾಗಿದೆ ಎಂದರು.
ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯದಲ್ಲಿ ಜಿಲ್ಲೆಯು ಅಭಿವೃದ್ದಿ ಹೊಂದಲಿದೆ.
ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು, ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ನಿರ್ವಸಿತರಿಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ 500 ಕೋಟಿ ರೂ. ಮಂಜೂರು ಮಾಡಿದೆ ಎಂದರು.
ಇದೇ ರೀತಿ ವಿಐಎಸ್‍ಎಲ್ ಸಮಸ್ಯೆ ಬಗೆಹರಿಸುವ ಕುರಿತು ಮುಂದಿನ ವಾರ ಬೆಂಗಳೂರಿನಲ್ಲಿ ಎಲ್ಲಾ ಪ್ರತಿನಿಧಿಗಳ ಸಭೆ ನಡೆಸಿ, ಈ ಕಾರ್ಖಾನೆಯನ್ನು ಮುಂದುವರೆಸುವ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಶಾಸಕ ಕೆ.ಎಸ್. ಈಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಕೆ.ಬಿ.ಅಶೋಕ ನಾಯ್ಕ್, ಆಯನೂರು ಮಂಜುನಾಥ, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿ ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮತ್ತಿತರರು ಇದ್ದರು.