HomeKarnatakaಡಿ.ಕೆ. ಶಿವಕುಮಾರ್ ನೇತೃತ್ವದ 100 ದಿನದ ಆಡಳಿತದಲ್ಲಿ ಗಮನಾರ್ಹ ಸಾಧನೆ ಇಲ್ಲ: ಮಾಜಿ ಸಚಿವ ಆರಗ...

ಡಿ.ಕೆ. ಶಿವಕುಮಾರ್ ನೇತೃತ್ವದ 100 ದಿನದ ಆಡಳಿತದಲ್ಲಿ ಗಮನಾರ್ಹ ಸಾಧನೆ ಇಲ್ಲ: ಮಾಜಿ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ನೂರು ದಿನಗಳ ಆಡಳಿತದಲ್ಲಿ ಗಮನಾರ್ಹ ಸಾಧನೆ ಕಾಣುತ್ತಿಲ್ಲ. ಇದು ಶೂನ್ಯ ಸಾಧನೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರು ನೀಡಿದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಲಂಚಗುಳಿತನ ಮತ್ತು ಭ್ರಷ್ಟಾಚಾರಕ್ಕೆ ಸರ್ಕಾರದಲ್ಲಿ ಅವಕಾಶ ನೀಡಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ಬಳ್ಳಾರಿ ಪಾದಯಾತ್ರೆ ರಾಜ್ಯದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಅದು ಇದೀಗ ಜನಾಕ್ರೋಶದ ಯಾತ್ರೆಯಾಗಿ ಪರಿವರ್ತನೆಯಾಗಿದೆ. ಬರಗಾಲ ಸೇರಿದಂತೆ ರಾಜ್ಯದ ಜನರ ಸಮಸ್ಯೆಗಳ ವಿಚಾರದಲ್ಲಿ ವಿರೋಧ ಪಕ್ಷವಾಗಿ ಬಿಜೆಪಿ ನಡೆಸಿದ ಹೋರಾಟಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಪಶ್ಚಿಮ ಘಟ್ಟದ ಪರಿಸರ ಸಂರಕ್ಷಣೆ ಹಾಗೂ ಅಲ್ಲಿನ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಪಕ್ಷಾತೀತವಾಗಿ ಚರ್ಚೆ ನಡೆಸಬೇಕಿದೆ. ಪರಿಸರ ಸಂರಕ್ಷಣೆ ಜನರನ್ನು ಹೊರಗಿಟ್ಟು ಸಾಧ್ಯವಿಲ್ಲ. ಹೀಗಾಗಿ ಪಶ್ಚಿಮ ಘಟ್ಟದ ನಿವಾಸಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂದರು.

ಗಾಡ್ಗಿಳ್ ವರದಿ ಹಾಗೂ ಕಸ್ತೂರಿ ರಂಗನ್ ವರದಿಗಳಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲೇ ಚಾಲನೆ ನೀಡಲಾಗಿತ್ತು. 2009–10ರ ಅವಧಿಯಲ್ಲಿ ಅಂದಿನ ಕೇಂದ್ರ ಪರಿಸರ ಸಚಿವರಾಗಿದ್ದ ಜೈರಾಮ್ ರಮೇಶ್ ಅವರ ನೇತೃತ್ವದಲ್ಲಿ ಗಾಡ್ಗಿಳ್ ಸಮಿತಿ ರಚನೆಯಾಗಿತ್ತು. ನಂತರ ಕಸ್ತೂರಿ ರಂಗನ್ ಸಮಿತಿಯನ್ನೂ ಯುಪಿಎ ಸರ್ಕಾರವೇ ನೇಮಿಸಿತ್ತು. ಈ ವಿಚಾರದಲ್ಲಿ ಮೊದಲ ಅಧಿಸೂಚನೆಯೂ ಯುಪಿಎ ಸರ್ಕಾರದ ಅವಧಿಯಲ್ಲೇ ಹೊರಬಂದಿತ್ತು. ವರದಿಯಿಂದ ಈಗ ಆಗುತ್ತಿರುವ ಅನ್ಯಾಯಕ್ಕೆ ಕಾಂಗ್ರೆಸ್ ಆತ್ಮಗೌರವ ಇದ್ದರೆ ಪಶ್ಚಿಮಘಟ್ಟ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

2008ರಿಂದ 2018ರವರೆಗೆ ಕಿಮ್ಮನೆ ರತ್ನಾಕರ್ ಶಾಸಕರಾಗಿದ್ದ ಅವಧಿಯಲ್ಲೇ ಗಾಡ್ಗಿಳ್ ಹಾಗೂ ಕಸ್ತೂರಿ ರಂಗನ್ ವರದಿಗಳು ಬಂದಿದ್ದವು. ಆಗ ಮೌನವಾಗಿದ್ದವರು ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈಗ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರಗ ಜ್ಞಾನೇಂದ್ರ ಟೀಕಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕಸ್ತೂರಿ ರಂಗನ್ ವರದಿ ಕುರಿತು ಎಷ್ಟು ಅಧ್ಯಯನವಿದೆ ಎಂಬುದು ಪ್ರಶ್ನೆಯಾಗಿದ್ದು, ಈ ವಿಚಾರದಲ್ಲಿ ಮಾತನಾಡುವ ಮುನ್ನ ಸಮಗ್ರ ಅಧ್ಯಯನ ಮಾಡುವುದು ಸೂಕ್ತ. ಕಿಮ್ಮನೆ ರತ್ನಾಕರ್ ಅವರಿಗೆ ಈ ವರದಿ ಬಗ್ಗೆ ಮಾಹಿತಿ ಇಲ್ಲ ಎಂದ ಅವರು, ಬಾಯಿಗೆ ಬಂದಂತೆ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದರು.

ಕೇರಳ ಮಾದರಿಯಲ್ಲಿ ಪಶ್ಚಿಮ ಘಟ್ಟದ ಯಾವ ಪ್ರದೇಶಗಳನ್ನು ವರದಿಯ ವ್ಯಾಪ್ತಿಗೆ ಸೇರಿಸಬೇಕು, ಯಾವುದನ್ನು ಹೊರಗಿಡಬೇಕು ಎಂಬುದರ ಕುರಿತು ರಾಜ್ಯ ಸರ್ಕಾರ ಸಮಗ್ರ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಬೇಕು. ಆ ಕೆಲಸ ಮಾಡುವ ಬದಲು ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದರು.

ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ಕುರಿತು ವಿಶೇಷ ಅಧಿವೇಶನ ಕರೆದಿರುವುದನ್ನು ಸ್ವಾಗತಿಸುತ್ತೇನೆ. ಇದರಲ್ಲಿ ಪಕ್ಷಾತೀತವಾಗಿ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ. ಈ ವಿಚಾರದಲ್ಲಿ ನಾವೆಲ್ಲರೂ ಭಾಗವಹಿಸುತ್ತೇವೆ ಎಂದರು.

ಕಸ್ತೂರಿ ರಂಗನ್ ವರದಿ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕಾಂಗ್ರೆಸ್ ನಾಯಕರು ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ತಮ್ಮದೇ ಸರ್ಕಾರದ ಅವಧಿಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಜನರ ಮುಂದೆ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಗಣೇಶ್ ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular