ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಈ ಆದೇಶವು ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತವೆ. ದೇಶದ ಆಂತರಿಕ ಭದ್ರತೆಗೆ ದೊಡ್ಡ ಕಂಟಕವಾಗಲಿದೆ ಎಂದು ಆರೋಪಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.
ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸುವಂತೆ ಶೋಭಾ ಕರಂದ್ಲಾಜೆ, ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ. ಭಾರತದ ಸಂವಿಧಾನವು ದೇಶದ ಎಲ್ಲಾ ನಾಗರಿಕರಿಗೂ ಒಂದೇ ಪೌರತ್ವವನ್ನು ಕಲ್ಪಿಸಿದೆ. ಆದರೆ ಕರ್ನಾಟಕ ಸರ್ಕಾರವು ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಹೊರಟಿರುವುದು ಕಾನೂನುಬಾಹಿರವಾಗಿದೆ. ಇದು ಸಂವಿಧಾನದ ಸಮಾನತೆಯ ಹಕ್ಕನ್ನು ಪ್ರತಿಪಾದಿಸುವ 14ನೇ ವಿಧಿಯ ನೇರ ಉಲ್ಲಂಘನೆಯಾಗಿದೆ ಎಂದು ಅಮಿತ್ ಶಾಗೆ ಬರೆದಿರುವ ಪತ್ರದಲ್ಲಿ ಶೋಭಾ ಕರಂದ್ಲಾಜೆ ಉಲ್ಲೇಖಿಸಿದ್ದಾರೆ.
ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ಕೇವಲ ಸ್ಥಳೀಯ ಕಂದಾಯ ಅಧಿಕಾರಿಗಳ ಪರಿಶೀಲನೆ ಮತ್ತು ಸ್ಥಳೀಯ ದಾಖಲೆಗಳ ಆಧಾರದ ಮೇಲೆ ಈ ಪ್ರಮಾಣಪತ್ರವನ್ನು ನೀಡಲು ಉದ್ದೇಶಿಸಲಾಗಿದೆ. ಇದರಲ್ಲಿ ಭಾರತೀಯ ಪೌರತ್ವವನ್ನು ಕೇಂದ್ರ ಏಜೆನ್ಸಿಗಳ ಮೂಲಕ ಕಡ್ಡಾಯವಾಗಿ ಪರಿಶೀಲಿಸುವ ಯಾವುದೇ ದೃಢವಾದ ವ್ಯವಸ್ಥೆ ಇಲ್ಲ. ಇದರಿಂದಾಗಿ ದೇಶದೊಳಗೆ ಅಕ್ರಮವಾಗಿ ನುಸುಳಿರುವ ವಿದೇಶಿ ಪ್ರಜೆಗಳು ಅಥವಾ ಅಕ್ರಮ ವಲಸಿಗರು ಸುಲಭವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಈ ‘ಶಾಶ್ವತ ವಸತಿ ಪ್ರಮಾಣಪತ್ರ’ ಪಡೆಯುವ ಅಪಾಯವಿದೆ.
ಒಮ್ಮೆ ಈ ಪ್ರಮಾಣಪತ್ರ ಕೈಸೇರಿದರೆ, ಅದನ್ನು ಬಳಸಿ ಅವರು ಸರ್ಕಾರದ ಸವಲತ್ತುಗಳು, ಶೈಕ್ಷಣಿಕ ಪ್ರವೇಶಾತಿ ಹಾಗೂ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲಿದ್ದಾರೆ. ಇದು ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಹೊರಹಾಕುವ ಕೇಂದ್ರ ಸರ್ಕಾರದ ಪ್ರಯತ್ನಗಳಿಗೆ ಹಿನ್ನಡೆ ಉಂಟುಮಾಡುತ್ತದೆ ಎಂದು ಶೋಭಾ ಕರಂದ್ಲಾಜೆ ಆತಂಕ ವ್ಯಕ್ತಪಡಿಸಿದ್ದಾರೆ.
ಪೌರತ್ವ, ವಲಸೆ ಮತ್ತು ದೇಶದ ಆಂತರಿಕ ಭದ್ರತೆಯ ವಿಷಯಗಳು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ರಾಜ್ಯ ಸರ್ಕಾರಗಳು ಇಂತಹ ಕಾಯ್ದೆ ತರುವುದರಿಂದ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಬರುತ್ತದೆ ಎಂದಿರುವ ಶೋಭಾ ಕರಂದ್ಲಾಜೆ, ಕೇಂದ್ರ ಗೃಹ ಸಚಿವಾಲಯಕ್ಕೆ ಕೆಲವು ಪ್ರಮುಖವಾಗಿ ಬೇಡಿಕೆಗಳನ್ನು ಇಟ್ಟಿದ್ದಾರೆ.
ಕರ್ನಾಟಕದ ಪರ್ಮನೆಂಟ್ ರೆಸಿಡೆನ್ಶಿಯಲ್ ಸರ್ಟಿಫಿಕೇಟ್ (PRC) ಆದೇಶದ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲಿಸಬೇಕು.
ಈ ಪರಿಶೀಲನೆ ಮುಗಿಯುವವರೆಗೆ ಅಧಿಸೂಚನೆಯ ಅನುಷ್ಠಾನಕ್ಕೆ ತಕ್ಷಣವೇ ತಡೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.
ಯಾವ ಅಧಿಕಾರದ ಅಡಿಯಲ್ಲಿ ಈ ನಿಯಮ ತರಲಾಗಿದೆ ಎಂದು ರಾಜ್ಯ ಸರ್ಕಾರದಿಂದ ವರದಿ ಕೇಳಬೇಕು.
ಕೇಂದ್ರ ಏಜೆನ್ಸಿಗಳಿಂದ ಪೌರತ್ವ ಪರಿಶೀಲನೆ ಆಗದ ಹೊರತು ಯಾವುದೇ ಪ್ರಮಾಣಪತ್ರ ವಿತರಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

