ಬೆಂಗಳೂರು: ಪೂರ್ವಾನುಮತಿ ಪಡೆದುಕೊಳ್ಳದೆ ಏಕಾಏಕಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ರಸ್ತೆ ಗುಂಡಿ ಮುಚ್ಚಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರ ವಿರುದ್ಧ ಬೆಂಗಳೂರಿನ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಮುಖಂಡ ಮತ್ತು ಬಿಬಿಎಂಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ, ಮಂಜುನಾಥ, ಗಂಗಮ್ಮ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಹಾಯಕ ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನ ಮೇರೆಗೆ ಗೋವಿಂದರಾಜನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಸ್ತೆ ಗುಂಡಿ ಮುಚ್ಚದೆ ಸಾರ್ವಜನಿಕರಿಗೆ ಸರ್ಕಾರ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ವಿಜಯನಗರದ ಎಂಸಿ ಲೇಔಟ್ ಸರ್ವಜ್ಞ ಶಾಲೆ ಬಳಿ ಉಮೇಶ್ ಶೆಟ್ಟಿ ನೇತೃತ್ವದಲ್ಲಿ 20 ರಿಂದ 25 ಜನರು ಗುಂಪು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಅನುಮತಿ ಪಡೆಯದ ಕಾರಣ ಮತ್ತು ಸಾರ್ವಜನಿಕರ ಓಡಾಟ, ವಾಹನ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ಪ್ರಕರಣದ ದಾಖಲಿಸಲಾಗಿದೆ ಎನ್ನಲಾಗಿದೆ.