ರಾಯಚೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಬಿಸಿಲ ತಾಪ ತಾಳಲಾರದೆ ಕೃಷಿ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿಕ್ಕನಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಚಿಕ್ಕನಗೂರು ಗ್ರಾಮದ ನಿವಾಸಿ ಸುಕನ್ಯಾ ಮಹಾವೀರ ಸಿಂಗ್(50) ಮೃತಪಟ್ಟ ಮಹಿಳೆ. ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಗೂರು ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಾಲೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿತ್ತು. ಈ ವೇಳೆ ಕೆಲಸ ಮಾಡುತ್ತಿದ್ದ ಸುಕನ್ಯಾ ಬಿಸಿಲಿನ ತಾಪಕ್ಕೆ ತಲೆ ಸುತ್ತಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡುವಂತೆ ಕೃಷಿ ಕೂಲಿಕಾರ್ಮಿಕರು ಒತ್ತಾಯಿಸಿದ್ದಾರೆ.