ಬೆಂಗಳೂರು: ರಾಜಾನುಕುಂಟೆಯ ಖಾಸಗಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಆಕೆಯ ತಂದೆಯೇ ಕಾಲೇಜಿಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಗಾಯಗೊಂಡ ಯುವತಿಯನ್ನು ಲಕ್ಷ್ಮೀ ದುರ್ಗಾ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಆಕೆಯ ತಂದೆ ನಾಗೇಂದ್ರ ಎಂದು ಪೊಲೀಸರು ತಿಳಿಸಿದ್ದಾರೆ. ಜುಲೈ 25ರಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲೇ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಮಗಳನ್ನು ಭೇಟಿಯಾಗಬೇಕೆಂದು ಹೇಳಿ ಕಾಲೇಜಿಗೆ ಬಂದ ನಾಗೇಂದ್ರ, ಬಳಿಕ ಕ್ಯಾಬಿನ್ಗೆ ನುಗ್ಗಿ ಲಕ್ಷ್ಮೀ ದುರ್ಗಾ ಅವರ ಹೊಟ್ಟೆ, ಎದೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗೇಂದ್ರನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ದಾಳಿಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

