ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ನಾಲ್ಕು ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಟಸಂದ್ರ ಸಮೀಪ ಬೋಳುಗುಟ್ಟ ಬಳಿ ನಡೆದಿದೆ.
ಅಸ್ಸಾಂ ಮೂಲದ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್ ನಲ್ಲಿ ಪೋಷಕರೊಂದಿಗೆ ವಾಸವಾಗಿದ್ದಳು. ಪೋಷಕರು ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದು, ಗುರುವಾರ ಬಾಲಕಿಯನ್ನು ಮನೆಯಲ್ಲೇ ಬಿಟ್ಟು ಚಿಂದಿ ಆಯಲು ಹೋಗಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಬಾಲಕಿ ಕಾಣೆಯಾಗಿದ್ದಳು. ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು.
ಪೊಲೀಸರು ಹುಡುಕಾಟ ನಡೆಸಿದಾಗ ಬೋಳುಗುಟ್ಟದ ನಿರ್ಜನ ನೀಲಗಿರಿ ತೋಪಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ನಗ್ನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆಗೈದ ಶಂಕೆ ವ್ಯಕ್ತವಾಗಿದೆ. ಮಗುವನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ದೇಹ ಮತ್ತು ಮುಖದ ಮೇಲೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ತಂಡ ಸಹಿತ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

