ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ಹೃದಯಾಘಾತದಿಂದ ಆರು ವರ್ಷದ ಬಾಲಕ ಮೃತಪಟ್ಟ ಆಘಾತಕಾರಿ ಘಟನೆ ನಡೆದಿದೆ.
ತ್ರಿಲೋಕ್ ಜೈನ್(6) ಮೃತಪಟ್ಟ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿರುವ ತ್ರಿಲೋಕ್ ಜೈನ್ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ.
ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ವೇಳೆ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ ತ್ರಿಲೋಕ್ ನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಕರು, ಶಾಲಾ ಅಭಿವೃದ್ಧಿ ಸದಸ್ಯರು, ಗ್ರಾಮಸ್ಥರು ಬಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ.

