ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಚರ್ಚ್ ರಸ್ತೆಯಲ್ಲಿ ಗುರುವಾರ ಮುಂಜಾನೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಾರ್ಕೂರು ಮೂಲದ 45 ವರ್ಷದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುರುವಾರ ಮುಂಜಾನೆ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕುಂದಾಪುರದಲ್ಲಿ ಆತಂಕ ಸೃಷ್ಟಿಸಿದೆ. ಕುಂದಾಪುರದ ಚರ್ಚ್ ಸಮೀಪ ಈ ಕೃತ್ಯ ನಡೆದಿದ್ದು, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ಮುಂಜಾನೆ ವೇಳೆ ಚರ್ಚ್ ಸಮೀಪ ಇದ್ದ ವೇಳೆ ದುಷ್ಕರ್ಮಿಗಳು ಸಮೀಪದಿಂದಲೇ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟಿನ ತೀವ್ರತೆಗೆ ಉದ್ಯಮಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ವೈಷಮ್ಯ, ವ್ಯವಹಾರಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸಾಕ್ಷ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಆರೋಪಿಗಳನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಈ ಘಟನೆ ಕುಂದಾಪುರ ಪ್ರದೇಶದಲ್ಲಿ ಸಂಚಲನ ಮೂಡಿಸಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇಂದು ಬೆಳಗಿನ ಜಾವ ಸುಮಾರು 4 ಗಂಟೆ ವೇಳೆಗೆ ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕುಂದಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

