ನವದೆಹಲಿ: ಸರ್ಕಾರಿ ಜಮೀನು ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು ಎಂದರು.
ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

