ಕಲಬುರಗಿ: ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲಿಯೂ ಭೀಮಾ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ತತ್ತರಿಸಿ ಹೋಗಿವೆ. ಕೃಷಿ ಭೂಮಿ, ಗ್ರಾಮಗಳೇ ಜಲಾವೃತಗೊಂಡಿದ್ದು, ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ.
ಮಳೆ ಹಾನಿ, ಪ್ರವಾಹಪೀಡಿತ ಪ್ರದೇಶಗಳನ್ನು ಖುದ್ದು ಪರಿಶೀಲನೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕದಲ್ಲಿ ವೈಮಾನಿಕ ಸಮೀಕ್ಷೆ ಆರಂಭಿಸಿದ್ದಾರೆ. ಕಲಬುರಗಿಯಿಂದ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಆರಂಭವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಕೃಷ್ಣಭೈರೇಗೌಡ ಸಾಥ್ ನೀಡಿದ್ದಾರೆ. ವೈಮಾನಿಕ ಸಮೀಕ್ಷೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಮಳೆ ಹಾನಿ ಬಗ್ಗೆ ಮಾಹಿತಿ ಪಡೆದರು.
ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.