ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಟ್ಟಿಗೆ ದಾವಣಗೆರೆಗೆ ತೆರಳಿದರು. ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಮೊದಲ ಬಾರಿಗೆ ಉಭಯ ನಾಯಕರು ಮುಖಾಮುಖಿಯಾಗುತ್ತಿದ್ದಾರೆ.
ಶುಕ್ರವಾರ ಬೆಂಗಳೂರು ನಗರದ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಒಟ್ಟಿಗೆ ದಾವಣಗೆರೆಗೆ ತೆರಳಿದರು. ಉಭಯ ನಾಯಕರು ಸಂಜೆಯ ತನಕ ದಾವಣಗೆರೆಯಲ್ಲಿಯೇ ಇರಲಿದ್ದಾರೆ.
ಶಾಮನೂರು ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ದಾವಣಗೆರೆಗೆ ಭೇಟಿ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (94) ಡಿಸೆಂಬರ್ 14ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದರು. ಕೈಲಾಸ ಶಿವಗಣಾರಾಧನೆ ಕಾರ್ಯಕ್ರಮ ಇಂದು ನಡೆಯುತ್ತಿದ್ದು, ವಿವಿಧ ಸಚಿವರು, ಬೇರೆ ಬೇರೆ ಪಕ್ಷದ ನಾಯಕರು ಆಗಮಿಸುತ್ತಿದ್ದಾರೆ.
ಪ್ರಗತಿ ಪರಿಶೀಲನಾ ಸಭೆ: ಶಾಮನೂರು ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಾವಣಗೆರೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.
ದಾವಣಗೆರೆಯಿಂದ ಬೆಂಗಳೂರು ನಗರಕ್ಕೆ ವಾಪಸ್ ಆಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ 7 ಗಂಟೆಗೆ ದೆಹಲಿಗೆ ತೆರೆಳಲಿದ್ದಾರೆ. ದೆಹಲಿಯಲ್ಲಿ ಡಿಸೆಂಬರ್ 27ರ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿದ್ದಾರೆ.
ಆದರೆ ಈ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನವಿಲ್ಲ. ಆದ್ದರಿಂದ ಅವರು ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಹೈಕಮಾಂಡ್ ಕರೆ ಮಾಡಿದರೆ ಅಥವ ಸಭೆಗೆ ಆಹ್ವಾನಿಸಿದರೆ ಮಾತ್ರ ಡಿ.ಕೆ.ಶಿವಕುಮಾರ್ ಸಹ ದೆಹಲಿ ವಿಮಾನ ಏರಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಈ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಸೇರಿ 5 ನಾಯಕರಿಗೆ ಸಭೆಗೆ ಆಹ್ವಾನ ನೀಡಲಾಗಿದೆ.
ಕರ್ನಾಟಕದ ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಆದ್ದರಿಂದ ರಾಹುಲ್ ಗಾಂಧಿ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿ ಈ ವಿಚಾರದ ಕುರಿತು ಚರ್ಚಿಸುವ ನಿರೀಕ್ಷೆ ಇದೆ.
ಹೈಕಮಾಂಡ್ ನಾಯಕರಿಂದ ಕರೆ ಬಂದರೆ ಮಾತ್ರ ದೆಹಲಿಗೆ ತೆರಳುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಕರ್ನಾಟಕದ ರಾಜಕೀಯದ ಕುರಿತು ಹೈಕಮಾಂಡ್ ನಾಯಕರು ಗಮನಹರಿಸಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.
ನಾಯಕತ್ವ ಬದಲಾವಣೆ ಗೊಂದಲ ಸ್ಥಳೀಯವಾಗಿ ಉಂಟಾಗಿರುವುದು. ಅದನ್ನು ಸ್ಥಳೀಯ ನಾಯಕರೇ ಬಗೆಹರಿಸಿಕೊಳ್ಳಬೇಕು. ಹೈಕಮಾಂಡ್ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ. ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ” ಎಂದು ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಹ ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

