ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಟ್ಟಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದರು. ರಾಜ್ಯ ರಾಜಕೀಯದಲ್ಲಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಮಂಗಳವಾರ ಮೈಸೂರಿನಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರು ಭೇಟಿ ಮಾಡಿದರು.
ಈ ಕುರಿತು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರನ್ನು ರಾಜ್ಯಕ್ಕೆ ಪ್ರೀತಿಯಿಂದ ಬರಮಾಡಿಕೊಂಡು, ಶುಭ ಹಾರೈಸಿದೆ ಎಂದು ಹೇಳಿದ್ದಾರೆ.
ತಮಿಳುನಾಡು ಭೇಟಿ: ಕರ್ನಾಟಕ ಭೇಟಿಗಾಗಿ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿಲ್ಲ. ಅವರು ವಿಧಾನಸಭೆ ಚುನಾವಣೆ ನಡೆಯಲಿರುವ ತಮಿಳುನಾಡು ರಾಜ್ಯಕ್ಕೆ ಭೇಟಿ ನೀಡುವ ಕಾರಣಕ್ಕೆ ಮೈಸೂರಿಗೆ ಆಗಮಿಸಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು.
ರಾಹುಲ್ ಗಾಂಧಿ ನೀಲಗಿರಿಯ ಖಾಸಗಿ ಶಾಲೆಯೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಅವರು ಒಂದು ದಿನ ಇದೇ ಶಾಲೆಯಲ್ಲಿ ತಂಗಿದ್ದರು.
ತಮಿಳುನಾಡು ವಿಧಾನಸಭಾ ಚುನಾವಣೆ 2026ಕ್ಕೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಂತಹ ಹೊತ್ತಿನಲ್ಲಿಯೇ ರಾಹುಲ್ ಗಾಂಧಿ ಈ ರಾಜ್ಯ ಭೇಟಿಯಲ್ಲಿ ಯಾವುದೇ ರಾಜಕೀಯ ಕಾರ್ಯಕ್ರಮಗಳಿಲ್ಲ.
ರಾಹುಲ್ ಗಾಂಧಿ ದೆಹಲಿಯಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನೀಲಗಿರಿ ಜಿಲ್ಲೆಯ ಗೂಡಲೂರಿಗೆ ತೆರಳಲಿದ್ದಾರೆ. ಅಲ್ಲಿನ ಮಾರ್ನಿಂಗ್ ಸ್ಟಾರ್ ಹೈಯರ್ ಸೆಕೆಂಡರಿ ಸ್ಕೂಲ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
2022ರ ಅಕ್ಟೋಬರ್‌ನಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ, ಕೇರಳದಿಂದ ಕರ್ನಾಟಕಕ್ಕೆ ಹೋಗುವ ಮಾರ್ಗಮಧ್ಯೆ ಗೂಡಲೂರಿನಲ್ಲಿ ತಂಗಿದ್ದಾಗ ಅವರು ಇದೇ ಶಾಲೆಯ ಆವರಣದಲ್ಲಿ ವಾಸ್ತವ್ಯ ಹೂಡಿದ್ದರು. ಆಗ ರಾಹುಲ್ ಗಾಂಧಿ ಶಾಲಾ ಆಡಳಿತ ಮಂಡಳಿಗೆ ಕಾರ್ಯಕ್ರಮಕ್ಕೆ ಬರುವುದಾಗಿ ಭರವಸೆ ಕೊಟ್ಟಿದ್ದರು. ಈಗ ಅವರು ಕೇವಲ ಈ ಕಾರ್ಯಕ್ರಮಕ್ಕಾಗಿಯೇ ತಮಿಳುನಾಡು ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.
ತಮಿಳುನಾಡು ಭೇಟಿಯ ಅವಧಿಯಲ್ಲಿ ರಾಹುಲ್ ಗಾಂಧಿ ಯಾವುದೇ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಒಂದು ವೇಳೆ ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ ಮೈತ್ರಿಯಲ್ಲಿ ಬಿರುಕು ಮೂಡದಿದ್ದರೆ, ವಿರೋಧ ಪಕ್ಷದ ನಾಯಕರಾದ ಅವರು ಸಾರ್ವಜನಿಕ ಸಭೆಯಲ್ಲಿ ಅಥವಾ ಯಾವುದಾದರೂ ರಾಜಕೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ರಾಹುಲ್ ಗಾಂಧಿ ಭೇಟಿ ಮಾಡಲು ತೆರಳುತ್ತಿಲ್ಲ. ಅವರು ತಮ್ಮ ಕುಟುಂಬ ಸದಸ್ಯರೊಬ್ಬರನ್ನು ರಾಹುಲ್ ಗಾಂಧಿ ಭೇಟಿಗೆ ಕಳಿಸಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಭೇಟಿಯ ವೇಳೆ ರಾಜಕೀಯ ಚರ್ಚೆಗಳು ನಡೆಯುವ ಸಾಧ್ಯತೆ ಕಡಿಮೆ ಇದೆ.
2026ರ ಚುನಾವಣೆಗೆ ಸೀಟು ಹಂಚಿಕೆ, ಅಧಿಕಾರ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಮತ್ತು ಡಿಎಂಕೆ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಮಿಳುನಾಡು ರಾಜ್ಯದಲ್ಲಿ ಕಾಂಗ್ರೆಸ್ 50 ಸೀಟುಗಳಿಗೆ ಬೇಡಿಕೆ ಇಟ್ಟಿದ್ದು, 23 ಸೀಟು ನೀಡಲು ಡಿಎಂಕೆ ತೀರ್ಮಾನಿಸಿದೆ. ಅಧಿಕಾರ ಹಂಚಿಕೆ ಸೂತ್ರವನ್ನು ಡಿಎಂಕೆ ತಿರಸ್ಕಾರ ಮಾಡಿದೆ.

