ಬೆಂಗಳೂರು: ಒಂದೆಡೆ ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಬ್ಬು ಬೆಳೆಗಾರರ ಮುಖಂಡರ ಜೊತೆ ಮಹತ್ವದ ಸಭೆ ಆರಂಭಿಸಿದ್ದಾರೆ.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಈಗಾಗಲೇ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿರುವ ಸಭೆ ಮುಗಿದಿದ್ದು, ಕಬ್ಬು ಬೆಳೆಗಾರರ ಮುಖಂಡರ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆ, ಸಮಸ್ಯೆಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಪ್ರತಿಭಟನೆ ಹಿಂಪಡೆಯುವ ನಿಟ್ಟಿನಲ್ಲಿ ಮನವೊಲಿಕೆಗೆ ಸಭೆಯಲ್ಲಿ ಯತ್ನಿಸಲಾಗಿದೆ. ರೈತ ಮುಖಂಡರ ಸಭೆ ಬಳಿಕ ಮತ್ತೆ ಸಕ್ಕರೆ ಕಾರ್ಖಾನೆ ಮಾಲೋಕರೊಂದಿಗೂ ಸಿಎಂ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
