ಬೆಂಗಳೂರು: ಹಿಜಾಬ್ ನಿರ್ಬಂಧಿಸುವ ಬಿಜೆಪಿ ಸರ್ಕಾರದ ಆದೇಶ ಹಿಂಪಡೆದ ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರ ಮುನಿಸಿಗೆ ಹಿಜಾಬ್ ಮುಲಾಮು ಹಚ್ಚಲು ಹೊರಟಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ದಾವಣಗೆರೆ ಉಪಚುನಾವಣೆ ಸುತ್ತ ನಡೆದ ಘಟನೆಗಳ ನಂತರ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಬೆದರಿರುವ ಕಾಂಗ್ರೆಸ್ ಸರ್ಕಾರ, ಈಗ ತನ್ನ ಮತಬ್ಯಾಂಕ್ ಉಳಿಸಿಕೊಳ್ಳಲು ‘ಹಿಜಾಬ್’ ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ರಾಜ್ಯದ ನೈಜ ಸಮಸ್ಯೆಗಳಾದ ಬೆಲೆ ಏರಿಕೆ, ಭ್ರಷ್ಟಾಚಾರ, ರೈತರ ಸಂಕಷ್ಟ, ಕಾನೂನು ಸುವ್ಯವಸ್ಥೆಯ ವೈಫಲ್ಯ – ಇವೆಲ್ಲದರ ಬಗ್ಗೆ ಮೌನವಾಗಿರುವ ಕಾಂಗ್ರೆಸ್ ಸರ್ಕಾರ, ಮುನಿಸಿಕೊಂಡಿರುವ ಮುಸ್ಲಿಂ ಮತ ಬ್ಯಾಂಕ್ ಗೆ “ಹಿಜಾಬ್” ಮೂಲಕ ಮುಲಾಮು ಹಚ್ಚಲು ಹೊರಟಿದೆ ಎಂದು ಟೀಕಿಸಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರಸಂಹಿತೆಯನ್ನು ಮಾನ್ಯ ಹೈಕೋರ್ಟ್ ಎತ್ತಿ ಹಿಡಿದಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮುಖ್ಯ ಎಂದು ತೀರ್ಪು ನೀಡಿತ್ತು. ಈಗ ಕೋರ್ಟ್ ಆದೇಶವನ್ನೇ ಗಾಳಿಗೆ ತೂರಿ ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದು ಯಾವ ಸೀಮೆ ಜಾತ್ಯತೀತತೆ ಎಂದು ಪ್ರಶ್ನಿಸಿದ್ದಾರೆ.
ಒಂದು ಸಮುದಾಯದ ಹಿಜಾಬ್ಗೆ ಹಸಿರು ನಿಶಾನೆ ತೋರಿರುವ ಸಿಎಂ ಸಿದ್ಧರಾಮಯ್ಯ ಸರ್ಕಾರ, ಕೇಸರಿ ಶಾಲುವಿಗೆ ಮಾತ್ರ ನಿಷೇಧ ಹೇರಿದೆ. ನಿಮ್ಮ ಈ ಓಲೈಕೆ ರಾಜಕಾರಣ ಹಿಂದೂಗಳಿಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ ಮುಖ್ಯಮಂತ್ರಿಗಳೇ? ಶಾಲಾ-ಕಾಲೇಜುಗಳನ್ನು ಸಮಾನತೆಯ ಕೇಂದ್ರಗಳನ್ನಾಗಿ ನೋಡುವ ಬದಲು, ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ವಿಭಜಿಸುತ್ತಿರುವ ನಿಮ್ಮ ನಡೆಯೇ ನಾಚಿಕೆಗೇಡು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಅತಿಯಾದ ಓಲೈಕೆ ರಾಜಕಾರಣ ಮಾಡಿ ಯಾವ ದುಸ್ಥಿತಿಗೆ ತಲುಪಿದೆಯೋ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೂ ಅದೇ ಗತಿ ಕಾದಿದೆ. ಕರ್ನಾಟಕದಲ್ಲಿ ತುಷ್ಟೀಕರಣದ ಪರಾಕಾಷ್ಠೆ ತಲುಪಿರುವ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವುದು ಗ್ಯಾರಂಟಿ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸಂವಿಧಾನ ಮತ್ತು ನ್ಯಾಯಾಂಗದ ಆಶಯಗಳನ್ನು ಬಲಿಕೊಡುತ್ತಿರುವ ಈ ಸರ್ಕಾರಕ್ಕೆ ಜನರೇ ಅಂತ್ಯ ಹಾಡಲಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.

