ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮೇ 20ಕ್ಕೆ ಮೂರು ವರ್ಷ ತುಂಬಲಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಚಿಂತನೆ ನಡೆಸಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಜಿಲ್ಲೆಯಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಮೇ 20ರಂದು ರಾಜ್ಯ ಸರ್ಕಾರಕ್ಕೆ ಮೂರು ವರ್ಷ ಆಗಲಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿಯೇ ರಾಜ್ಯಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯದ ವಿವಿಧೆಡೆಯಿಂದ 2 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಲಿದ್ದು, ಸರ್ಕಾರದ ಯಶಸ್ವಿ ಯೋಜನೆಗಳ ಅನುಷ್ಠಾನ ಮತ್ತು ಇತರ ಇಲಾಖೆಗಳ ಪ್ರಗತಿ ದರ್ಶನ ಕುರಿತ ವಸ್ತು ಪ್ರದರ್ಶನ ನಡೆಯಲಿದೆ. ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುವುದು. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದು, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಪರಮೇಶ್ವರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

