ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಿ ರಿಪೋರ್ಟ್ ಸಲ್ಲಿಸಿದ ಬೆನ್ನಲ್ಲೇ ಇಡಿ ಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಣಾ ಅರ್ಜಿ ಸಲ್ಲಿಸಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತೊಂದು ಸಂಕಷ್ಟ ಎದುರಾಗಿದೆ.
ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ 500 ಕೋಟಿ ಕಿಕ್ ಬ್ಯಾಕ್ ಆರೋಪ ಕೇಳಿಬಂದಿದ್ದು, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ.
ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ, ರಾಜ್ಯಪಾಲರಿಗೆ ಪತ್ರ ಬರೆದು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಮನವಿ ಮಾಡಿದ್ದಾರೆ.
2015ರಲ್ಲಿ ಸಿಎಂ ಆಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಿದ್ದರು. ಹಾಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಸುಮಾರು 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದು, ಇದರಿಂದ ಸರ್ಕಾರಕ್ಕೆ 5000 ಕೋಟಿ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋರಲಾಗಿದೆ.