ನವದೆಹಲಿ: ಮುಖ್ಯಮಂತ್ರಿ ಸ್ಥಾನ ಬದಲಾವಣೆ, ಪವರ್ ಶೇರಿಂಗ್ ವಿಚಾರವಾಗಿ ಆರಂಭವಾಗಿದ್ದ ಚರ್ಚೆ, ಗೊಂದಲಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. 5 ವರ್ಷಗಳ ಕಾಲ ನಾನೇ ಸಿಎಂ. ಪವರ್ ಶೇರಿಂಗ್ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. ಯಾವುದೇ ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಬದಲಾಗಲಿ ಎಂಬ ಹೇಳಿಕೆ ನೀಡಿಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಸಿಎಂ ಬದಲಾವಣೆ ಚರ್ಚೆ ಅನವಶ್ಯಕ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಅದರಲ್ಲಿ ತಪ್ಪೇನೂ ಇಲ್ಲ, ಕೆಲ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸುತ್ತಾರೆ. ಹೆಚ್ಚಿನ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುವುದೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ನಾನಾಗಲಿ, ಡಿ.ಕೆ.ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳಿದ್ದನ್ನು ಪಾಲಿಸಲೇಬೇಕು ಎಂದರು.
ಪವರ್ ಶೇರಿಂಗ್ ಚರ್ಚೆಯಾಗಿಲ್ಲ. ಮುಂದಿನ ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. 2028ರಲ್ಲಿಯೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.