ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026–27ನೇ ಸಾಲಿನ ಬಜೆಟ್‌ನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಈಗಾಗಲೇ ಬೀಚ್ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ ಹಾಗೂ ಸಂಸ್ಕೃತಿಯ ವೈವಿಧ್ಯತೆ ಇರುವುದರಿಂದ ಈ ಯೋಜನೆ ಜಾರಿಯಾದರೆ ಪ್ರವಾಸಿಗರ ಸಂಖ್ಯೆಯೂ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.
ವಾಯುಯಾನ ಹಾಗೂ ಜಲಸಾಹಸ ಯೋಜನೆ ಅನುಷ್ಠಾನಗೊಳಿಸಲಾಗುವುದು. ಸೀ ಪ್ಲೇನ್, ಹೆಲಿಟ್ಯಾಕ್ಸಿ, ಜಾಯ್ ರೈಡ್, ರಿವರ್ ಕ್ರೂಸ್ಗೆ ಪ್ರೋತ್ಸಾಹ ನೀಡಲಾಗುತ್ತದೆ. ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ, ಪೊಲೀಸರಿಗೆ ಕೌಶಲ್ಯ ತರಬೇತಿ ನೀಡಲಾಗುವುದು. ಗದಗ-ಕಪ್ಪತ್ತಗುಂಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿಗೊಳಿಸಲಾಗುವುದು, ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿ ಕೈಮರದವರೆಗೆ ರೋಪ್ ವೇ ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕರಾವಳಿ ಭಾಗದ ಪ್ರಕೃತಿ ಸೌಂದರ್ಯ ಮತ್ತು ಸಂಸ್ಕೃತಿಯನ್ನು ಆಧರಿಸಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮೂಲಕ ಸ್ಥಳೀಯ ಆರ್ಥಿಕತೆಯನ್ನು ಬಲಪಡಿಸುವ ಉದ್ದೇಶ ಸರ್ಕಾರದ್ದಾಗಿದೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸೇವೆ ನೀಡುವವರ ಕೌಶಲ್ಯಾಭಿವೃದ್ಧಿಗೂ ಸರ್ಕಾರ ಒತ್ತು ನೀಡಿದೆ. ಪ್ರವಾಸಿಗರೊಂದಿಗೆ ನೇರ ಸಂಪರ್ಕ ಹೊಂದಿರುವ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗೆ ಮೃದು ಕೌಶಲ್ಯ (Soft Skills) ತರಬೇತಿ ನೀಡಲು ನಿರ್ಧರಿಸಲಾಗಿದೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮಾರ್ಗದರ್ಶಕರ ಅಗತ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಪ್ರವಾಸ ಮಾರ್ಗದರ್ಶಕರಿಗೆ ಡಿಪ್ಲೋಮಾ ಕೋರ್ಸ್ ಆರಂಭಿಸಲು ಸರ್ಕಾರ ಮುಂದಾಗಿದೆ. ಇದರ ಮೂಲಕ ತರಬೇತಿ ಪಡೆದ ಮಾರ್ಗದರ್ಶಕರು ಪ್ರವಾಸಿಗರಿಗೆ ಸ್ಥಳೀಯ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ಸಮಗ್ರ ಮಾಹಿತಿ ನೀಡುವ ಅವಕಾಶ ದೊರೆಯಲಿದೆ.
ರಾಜ್ಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಸಂಪರ್ಕಿಸುವ ಉದ್ದೇಶದಿಂದ ಗದಗ – ಕಪ್ಪತಗುಡ್ಡ – ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿಪಡಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅನೇಕ ಐತಿಹಾಸಿಕ ದೇವಾಲಯಗಳು ಹಾಗೂ ಪುರಾತನ ಸ್ಮಾರಕಗಳು ಇರುವುದರಿಂದ ಪ್ರವಾಸಿಗರನ್ನು ಆಕರ್ಷಿಸುವ ಪ್ರಮುಖ ಕೇಂದ್ರಗಳಾಗಿ ರೂಪುಗೊಳ್ಳುವ ಸಾಧ್ಯತೆ ಇದೆ.
ಪ್ರಕೃತಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಭಾಗವಾಗಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ – ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಸಾರ್ವಜನಿಕ – ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ರೋಪ್-ವೇ ನಿರ್ಮಿಸುವ ಯೋಜನೆ ಘೋಷಿಸಲಾಗಿದೆ. ಇದು ಪ್ರವಾಸಿಗರಿಗೆ ಹೊಸ ಅನುಭವ ನೀಡುವ ಜೊತೆಗೆ ಆ ಪ್ರದೇಶದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ.
ಮೈಸೂರು ನಗರದಲ್ಲಿಯೂ ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದಾಗಿ ಬಜೆಟ್‌ನಲ್ಲಿ ತಿಳಿಸಲಾಗಿದೆ. ಇದರಿಂದ ಮೈಸೂರು ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ.

