HomeKarnatakaBUDGET BREAKING: ಜಲಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ಯೋಜನೆಗಳಿಗೆ ಸಿಕ್ಕ ಕೊಡುಗೆಗಳೇನು?

BUDGET BREAKING: ಜಲಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ಯೋಜನೆಗಳಿಗೆ ಸಿಕ್ಕ ಕೊಡುಗೆಗಳೇನು?

ಬೆಂಗಳೂರು: “ನದಿಗಳು ನಮ್ಮೆಲ್ಲ ಮಾನವ ಸಮಾಜ ಮತ್ತು ಸಂಸ್ಕೃತಿಗಳ ಜೀವವಾಹಿನಿ. ಅವು ಕೊಳಕಾದರೆ, ಅವು ಬತ್ತಿದರೆ ನಮ್ಮ ಉಸಿರು ಉಡುಗುತ್ತಾ ಬಂದಂತೆ” ಎಂಬಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಸಾಲುಗಳನ್ನು ಉಲ್ಲೇಖಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜಲಸಂಪನ್ಮೂಲ ಹಾಗೂ ನೀರಾವರಿ ಯೋಜನೆಗಳಿಗೆ ಬಜೆಟ್ ನಲ್ಲಿ ಕೊಡುಗೆಗಳನ್ನು ಘೋಷಿಸಿದ್ದಾರೆ.

ಕರ್ನಾಟಕದ ಬಹು ನಿರೀಕ್ಷಿತ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ, ತಮಿಳುನಾಡು ರಾಜ್ಯವು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿಗಳು ವಜಾಗೊಂಡಿರುವುದು ಕರ್ನಾಟಕಕ್ಕೆ ಮಹತ್ವದ ಕಾನೂನು ಜಯವಾಗಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ, ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ನೀರಾವರಿ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗಿದೆ. 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ 2023-24ರ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ

11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು

2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು.

ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಯಾದ UKP Stage-III ಯೋಜನೆಯಡಿ ಆಲಮಟ್ಟಿ ಅಣೆಕಟ್ಟನ್ನು 519.6 ಮೀ. ಯಿಂದ 524.256 ಮೀ. ಗೆ ಎತ್ತರಿಸುವ ಕಾಮಗಾರಿಯಿಂದ ಮುಳುಗಡೆಯಾಗುವ ಜಮೀನುಗಳು ಹಾಗೂ ನೀರಾವರಿ ಕಾಲುವೆ ಜಾಲಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈತರು ಮತ್ತು ಸಂತ್ರಸ್ತರ ದೀರ್ಘಕಾಲದ ಬೇಡಿಕೆಗೆ ನಮ್ಮ ಸರ್ಕಾರ ಸ್ಪಂದಿಸಿ ಪರಿಷ್ಕೃತ ಒಪ್ಪಂದದ ದರಗಳನ್ನು ಅನುಮೋದಿಸಿದೆ. ಮುಳುಗಡೆಗೊಳ್ಳುವ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ನಿಗದಿಪಡಿಸಲಾಗಿದೆ. ಒಪ್ಪಂದದ ಐತೀರ್ಪುಗಳ ಮುಖಾಂತರ ಜಮೀನನ್ನು ಸ್ವಾಧೀನಪಡಿಸುವ ಪ್ರಕ್ರಿಯೆಯನ್ನು ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸಲಾಗುವುದು.

ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟುಗಳನ್ನು ಬದಲಾಯಿಸಿ ಹೊಸ ಗೇಟುಗಳ ಅಳವಡಿಕೆಯನ್ನು ಮುಂಗಾರು ಪೂರ್ವದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಶೇಖರಣೆಯಿಂದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಕುರಿತು ಈಗಾಗಲೇ ಚಿಂತಿಸಲಾಗಿದೆ. ಇವುಗಳಲ್ಲಿ ಸಮಯೋಚಿತ ಪರ್ಯಾಯ ಮಾರ್ಗದ ಕುರಿತು ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ ತುಂಗಭದ್ರಾ ಮಂಡಳಿಯ ಸಹಮತಿಯೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ತೀವ್ರತರವಾಗಿ ಪ್ರಯತ್ನಿಸಲಾಗುವುದು.

ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಡಿ ಅರಣ್ಯ ತೀರುವಳಿ ಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಪರಿಸರ ಸಚಿವಾಲಯ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿಯಲ್ಲಿ ಎರಡು ವರ್ಷಗಳಿಂದ ನಿರಂತರ ಪ್ರಯತ್ನಿಸಿದ್ದರೂ, ಈವರೆಗೆ ತೀರುವಳಿ ಲಭಿಸಿರುವುದಿಲ್ಲ. ಈ ಯೋಜನೆಗಳಿಗೆ ಈಗಾಗಲೇ ಗುತ್ತಿಗೆ ವಹಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಅರಣ್ಯ ತೀರುವಳಿ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಈ ವಿಳಂಬದಿಂದ ರಾಜ್ಯ ಸರ್ಕಾರದ ಹೊರೆ ಹೆಚ್ಚಾಗುತ್ತಿದೆ.

ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ಉಡುತೊರೆಹಳ್ಳ ಯೋಜನೆಯನ್ನು 490 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.

ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿ.ಎಂ.ಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗುವುದು.

ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನಾಲ್ಕು ನಿಗಮಗಳಡಿ ಪೂರ್ಣಗೊಳ್ಳುವ ಹಂತದಲ್ಲಿನ 12 ನೀರಾವರಿ ಯೋಜನೆಗಳು,
22 ಕೆರೆ ತುಂಬುವ ಯೋಜನೆಗಳು ಮತ್ತು ಮೂರು ಆಧುನೀಕರಣ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ 1.16 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಯೋಜನೆಗಳ ಪಟ್ಟಿಯನ್ನು ಅನುಬಂಧ-೧ರಲ್ಲಿ ಲಗತ್ತಿಸಿದೆ.

ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ 8,045 ಕೋಟಿ ರೂ. ಮೊತ್ತದ 75 ನೀರಾವರಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು. ಯೋಜನೆಗಳ ಪಟ್ಟಿಯನ್ನು ಅನುಬಂಧ-೨ರಲ್ಲಿ ಲಗತ್ತಿಸಿದೆ.

ರಾಜ್ಯದ ಕಾಡಾ ಪ್ರಾಧಿಕಾರದಡಿ ಹತ್ತಿಕುಣಿ ಹಾಗೂ ತುಂಗಭದ್ರಾ ಎಡದಂಡೆ ಶಾಖಾ ಕಾಲುವೆಯಡಿ ಬರುವ 4,745 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ Pressurised Piped Network ಪದ್ಧತಿಯನ್ನು ಅಳವಡಿಸಿ ನೀರಾವರಿ ವ್ಯವಸ್ಥೆಯನ್ನು ಆಧುನೀಕರಿಸಲಾಗುವುದು.

ಸಣ್ಣ ನೀರಾವರಿ:

ಹೆಬ್ಬಾಳ-ನಾಗವಾರ ಕಣಿವೆಯ ಮೂರನೇ ಹಂತದಲ್ಲಿ ಶಿಡ್ಲಘಟ್ಟದ ಅಮಾನಿ ಕೆರೆಯಿಂದ ಶಿಡ್ಲಘಟ್ಟ ತಾಲ್ಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲ್ಲೂಕಿನ 119 ಕೆರೆಗಳೂ ಸೇರಿ ಒಟ್ಟಾರೆ
164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು 237 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು.

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಹೆಚ್.ಎನ್ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಯನ್ನು 140 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು.

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ

259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ೧೧೯ ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯನ್ನು 650 ಕೋಟಿ ರೂ.ಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು.

2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏತ ನೀರಾವರಿ, ಚೆಕ್‌ ಡ್ಯಾಂ, ಕೆರೆಗಳ ಪುನಃಶ್ಚೇತನ ಅಭಿವೃದ್ಧಿ ಮುಂತಾದ 112 ಕಾಮಗಾರಿಗಳನ್ನು 1,793 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದಿಸಿದೆ. (ಅನುಬಂಧ-3)

ರಾಜ್ಯಾದ್ಯಂತ ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸಲು ಕೆರೆ ಬಳಕೆದಾರರ ಸಂಘಗಳನ್ನು ಬಲವರ್ಧನೆಗೊಳಿಸಲಾಗುವುದು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಜಿಡಗಾದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕ್‌-ಅಪ್‌ ಹಾಗೂ ಚೆಕ್‌ಡ್ಯಾಂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular